ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಕನ್ನಡಿಗರ ತೀವ್ರ ವಿರೋಧಧ ನಡುವೆಯೂ ಬೆಳಗಾವಿ ಸೇರಿದಂತೆ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.
ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ಆಡಳಿತ ಪಕ್ಷ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ವ್ಯಕ್ತಪಡಿಸಿವೆ .ಇದೊಂದು ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಕ್ರಮ ಎಂದು ಕಿಡಿ ಕಾರಿವೆ.
ವಾಪಸ್ ಪಡೆಯಿರಿ: ಮಹಾರಾಷ್ಟ್ರ ಸರ್ಕಾರ ಗಡಿ ಗ್ರಾಮಗಳ ಕನ್ನಡಿಗರಿಗೆ ಕಲ್ಪಿಸಿರುವ ಸೌಲಭ್ಯವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹಾರಾಷ್ಟ್ರ ಇದೇ ರೀತಿ ಉದ್ದಟತನ ಮುಂದುವರೆಸಿದರೆ ಕರ್ನಾಟಕ ಸರ್ಕಾರವೂ ಕೂಡ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿಯ ವಿಮೆ ಜಾರಿಗೊಳಿಸಲಾಗುವುದು ಎಂದು ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ ರಾಜ್ಯಗಳ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.
ಕರ್ನಾಟಕದ ಗಡಿಯಲ್ಲಿರುವ ಕೆಲವರಿಗೆ ವಿಮೆ ನೀಡುವ ಆದೇಶ ಮಾಡಿರುವುದು ಉದ್ದಟತನದ ಪರಮಾವಧಿಯಾಗಿದ್ದು, ಇದು ಎರಡು ರಾಜ್ಯಗಳ ನಡುವಿನ ಬಾಂಧವ್ಯ ಕದಡುವ ಪ್ರಯತ್ನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗಡಿ ವಿವಾದ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗಡಿ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸುವುದಿಲ್ಲ ಎಂದು ಒಪ್ಪಿಕೊಂಡಿದ್ದರು. ಆದರೆ ಈಗ ಕರ್ನಾಟಕದ 865 ಗ್ರಾಮಗಳ ಜನತೆಗೆ ಬಾಬು ಜಗಜೀವನ್ ರಾಮ್ ಆರೋಗ್ಯ ವಿಮೆ ಯೋಜನೆ ಜಾರಿಗೆ ಆದೇಶ ಮಾಡಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಕೆಲಸವಾಗಿದೆ ಎಂದರು.
ಮಹಾರಾಷ್ಟ್ರ ಸರ್ಕಾರ ತಕ್ಷಣ ತನ್ನ ಆದೇಶವನ್ನು ವಾಪಸ್ ಪಡೆದು, ಅಮಿತ್ ಷಾ ಅವರ ಸೂಚನೆಗೆ ಗೌವರ ಕೊಡುವ ಮೂಲಕ ಎರಡೂ ರಾಜ್ಯಗಳ ನಡುವಿನ ಬಾಂಧವ್ಯ ಕಾಪಾಡುವ ಕೆಲಸ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.
ಸಹಿಸಲು ಸಾಧ್ಯವಿಲ್ಲ: ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ನಡೆಸುತ್ತಿರುವ ಕೃತ್ಯಗಳು ಉದ್ದಟತನದಿಂದ ಕೂಡಿವೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಆದೇಶವನ್ನು ತಕ್ಷಣ ವಾಪಸ್ ಪಡೆಯದೆ ಇದ್ದರೆ ಪರಿಣಾಮ ನೆಟ್ಟಗಾಗದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭರವಸೆ ನೀಡಿದ್ದರು. ಇವರಿಬ್ಬರ ಮಾತಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಕವಡೆ ಕಾಸಿನ ಕಿಮ್ಮತ್ತು ಕೊಟ್ಟಿಲ್ಲ. ರಾಜ್ಯದ ಗಡಿಯೊಳಗೆ ಆರೋಗ್ಯ ವಿಮೆ ಜಾರಿಗೆ ಮಹಾರಾಷ್ಟ್ರ ಸರ್ಕಾರ ಯತ್ನಿಸಿದಾಗಲೇ ನಾವು ವಿರೋಧಿಸಿದ್ದೆವು. ಅಲ್ಲಿಯವರೆಗೆ ತೆಪ್ಪಗಿದ್ದ ರಾಜ್ಯದ ಮುಖ್ಯಮಂತ್ರಿಗಳು ನಮ್ಮ ಒತ್ತಡಕ್ಕೆ ಮಣಿದು ವೀರಾವೇಶದ ಮಾತುಗಳನ್ನಾಡಿದ್ದರು. ಆ ಆವೇಶ, ಬದ್ಧತೆಯನ್ನು ತೋರಿಸಬೇಕಾದ ಕಾಲ ಈಗ ಬಂದಿದೆ ಎಂದು ಹೇಳಿದ್ದಾರೆ.
ಗಡಿ ವಿವಾದ ಇತ್ಯರ್ಥಗೊಳ್ಳುವವರೆಗೆ ಎರಡೂ ರಾಜ್ಯಗಳು ವಿವಾದವನ್ನು ಕೆದಕಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಕೀತು ಮಾಡಿ ಎರಡೂ ರಾಜ್ಯಗಳ ಸದಸ್ಯರನ್ನೊಳಗೊಂಡ ಸಲಹಾ ಸಮಿತಿ ರಚಿಸಿದ್ದರು. ಆ ಸೂಚನೆಯನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಧಿಕ್ಕರಿಸಿದ್ದಾರೆ. ಬೆಳಗಾವಿ ಗಡಿವಿವಾದ ನ್ಯಾಯಾಲಯದ ಕಟಕಟೆಯಲ್ಲಿದೆ. ಕನ್ನಡಿಗರಿಗೆ ನ್ಯಾಯ ಸಿಗುತ್ತದೆ ಎನ್ನುವ ಭರವಸೆ ನಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ನಡುವೆ ರಾಜಕೀಯ ಲಾಭದ ದುರುದ್ದೇಶದಿಂದ ಮಹಾರಾಷ್ಟ್ರ ಆಗಾಗ ಗಡಿತಂಟೆಯನ್ನು ಕೆದಕುವ ಕಿಡಿಗೇಡಿತನ ಮಾಡುವುದು ಖಂಡನೀಯ. ಕನ್ನಡಿಗರು ಇದನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.



