ಬೆಂಗಳೂರು: ರಾಜ್ಯದ 7 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳನ್ನು Karnataka Institutes of Technology ಗಳಾಗಿ ಮೇಲ್ದರ್ಜೆಗೇರಿಸುವ ಕುರಿತು UVCE ಅಧ್ಯಕ್ಷ ಬಿ ಮುತ್ತು ರಾಮನ್ ಜತೆಗೆ ಸಿಎಂ Basavaraj Bommai ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪಾಲ್ಗೊಂಡರು.
ಈ ಕುರಿತು ಪ್ರತಿಕ್ರಿಯಿಸಿರುವ ಅಶ್ವತ್ಥ ನಾರಾಯಣ, ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಯ ಅಡಿಯಲ್ಲಿ ಹಾಸನ, ಹಾವೇರಿ, ಕೆ.ಆರ್. ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್ ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. ಕಾಲೇಜನ್ನು ಕೆಐಟಿ ಆಗಿ ಉನ್ನತೀಕರಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.
ಸಂಶೋಧನೆ, ನಾವೀನ್ಯತೆ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಉತ್ತೇಜನ ನೀಡುತ್ತಿದೆ. ಇದಕ್ಕಾಗಿ ವಿದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವ ಒಡಂಬಡಿಕೆಗಳನ್ನು ಈ ಕಾಲೇಜುಗಳು ಮಾಡಿಕೊಳ್ಳಲಿವೆ. ಈ ಮೂಲಕ ಇವುಗಳನ್ನು ಅಂತಾರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಈ ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಬೇಡಿಕೆ ಮತ್ತು ಉದ್ಯೋಗಾವಕಾಶ ಇರುವ ತಲಾ 2 ವಿಭಾಗಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ ಆಗಿ ಬೆಳೆಸಲಾಗುವುದು ಎಂದಿದ್ದಾರೆ.




