ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮ
ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನ ತೀವ್ರ ಹಿಂದುಳಿದಿದ್ದಾರೆ
ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಲಿಂಗಾಯತ ವೀರಶೈವ ಮಹಾಸಭಾ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ್ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದು ಸಮಾಜದ ಹಿರಿಯ ಮುಖಂಡ ಶಂಕರ ಬಿದರಿ ಘೋಷಿಸಿದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರನ್ನು ಆಯ್ಕೆ ಮಾಡಲು ಎಲ್ಲ ಸದಸ್ಯರೂ ಒಮ್ಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆಯಿತು ಎಂದರು.
ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ್ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.
ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಈಶ್ವರ್ ಖಂಡ್ರೆ, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ಘೋಷಿಸಿದರು.
ವೀರಶೈವ ಲಿಂಗಾಯತ ಸಮಾಜ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಈ ನಾಡಿನ ಅಭಿವೃದ್ಧಿಗೆ ನೀಡಿರುವ ಕೊಡುಗೆ ಅನುಪಮವಾದ್ದು. ನಮ್ಮ ಸಮಾಜದಲ್ಲೂ ಶೇ.40ರಿಂದ 50ರಷ್ಟು ಬಡವರಿದ್ದು, ಶೇ.30ಕ್ಕಿಂತ ಹೆಚ್ಚು ಜನ ತೀವ್ರ ಹಿಂದುಳಿದಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು. ಹೀಗಾಗಿ ಎಲ್ಲರಿಗೂ ಸಮಾನ ನ್ಯಾಯ ದೊರಕಿಸಲು ಸಭಾ ವತಿಯಿಂದ ನೂತನ ಅಧ್ಯಕ್ಷನಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರಿಗಾಗಿ ವಸತಿ ನಿಲಯ ನಿರ್ಮಾಣ ಮಾಡಲು ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ ನೆರವೇರಿಸಿ, ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ಘೋಷಿಸಿದರು.
ಈಗಾಗಲೇ ಹಲವು ಜಿಲ್ಲಾ ಕೇಂದ್ರಗಳಲ್ಲಿ ವೀರಶೈವ ಲಿಂಗಾಯತ ಭವನ ಇದ್ದು, ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ ಮಾಡಲೂ ಶ್ರಮಿಸಲಾಗುವುದು. ಈ ಭವನದಲ್ಲಿ ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ ನೀಡಲಾಗುವುದು ಎಂದರು.
ಪಂಚಾಚಾರ್ಯರ, ಜಗದ್ಗುರುಗಳ, ಮಠಾಧಿಪತಿಗಳ, ಹರ, ಚರ ಗುರು ಮೂರ್ತಿಗಳ, ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ ಕೆಲಸ ಮಾಡುತ್ತೇನೆ. ಒಗ್ಗಟ್ಟಿನಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ. ಎಲ್ಲ ಜಾತಿ, ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.


