ಎರಡು ತಿಂಗಳಲ್ಲಿ 1,300 ಕೆಪಿಎಸ್ ಶಾಲೆಗಳ ಸ್ಥಾಪನೆ: ಮಧು ಬಂಗಾರಪ್ಪ

2 days ago

4,500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ; 3ನೇ ತರಗತಿಯಿಂದಲೇ ಎಐ ಶಿಕ್ಷಣ
ಬೆಂಗಳೂರು: ಮುಂದಿನ ಎರಡು ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ 1,300 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಸ್ಥಾಪಿಸುವ ಗುರಿ ಹೊಂದಿದ್ದು, ಈ ಮೂಲಕ ಕರ್ನಾಟಕ ಶೈಕ್ಷಣಿಕವಾಗಿ ದೇಶದಲ್ಲೇ ಗಮನ ಸೆಳೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.


‘ಇಂಡಿಯಾ ಡೈಡ್ಯಾಕ್’ ಆಯೋಜಿಸಿದ್ದ ಅಂತರರಾಷ್ಟ್ರೀಯ ಶಿಕ್ಷಣ ಮತ್ತು ಕೌಶಲ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ಕೆಪಿಎಸ್ ಶಾಲೆಗಳಲ್ಲಿ ಪ್ರತಿ ವಿಷಯಕ್ಕೂ ನುರಿತ ಶಿಕ್ಷಕರನ್ನು ನೇಮಿಸಿ, ಮೂರನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (AI) ಹಾಗೂ ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು. ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಸಾಲ ಮತ್ತು ರಾಜ್ಯ ಸರ್ಕಾರದ ಅನುದಾನ ಸೇರಿ ಒಟ್ಟು 4,500 ಕೋಟಿ ರೂ. ವೆಚ್ಚದಲ್ಲಿ ಈ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಎಲ್ಕೆಜಿಯಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್ನಲ್ಲಿ ಶಿಕ್ಷಣ ಹಾಗೂ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಉದ್ದೇಶವಿದೆ ಎಂದರು.


ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಂಗೀತ, ರಂಗಭೂಮಿ ಶಿಕ್ಷಕರ ನೇಮಕ ಹಾಗೂ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಲಾಗುತ್ತಿದೆ. ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದುವುದನ್ನು ಕಡ್ಡಾಯಗೊಳಿಸಿದ್ದು, ಇಂದು ಮಕ್ಕಳು ಪ್ರತಿ ನೋಡದೆಯೇ ನಿರರ್ಗಳವಾಗಿ ಪ್ರಸ್ತಾವನೆ ಓದುತ್ತಿದ್ದಾರೆ ಎಂದು ಶ್ಲಾಘಿಸಿದರು.
ಶೃಂಗಸಭೆಯಲ್ಲಿ ಮಾಲ್ದೀವ್ಸ್ ಉನ್ನತ ಶಿಕ್ಷಣ ಸಚಿವ ಅಹಮದ್ ಶೆಫ್ಯೂ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಆರ್ಟ್ ಆಫ್ ಲಿವಿಂಗ್ನ ರವಿಶಂಕರ್, ಮಾಜಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ, ವಿಧಾನ ಪರಿಷತ್ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಹಾಜರಿದ್ದರು.

Leave a Reply