ಮಂಡ್ಯ: ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ (94) ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾಲವಶರಾದರು.
ಶ್ವಾಸಕೋಶ ಸಮಸ್ಯೆಯಿಂದ ಅವರು ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅವರು ನಿಧನರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದರು.
ಇದರ ನಡುವೆ ಆದಿಚುಂನಗಿರಿಶ್ರೀ ನಿರ್ಮಲಾನಂದ ಸ್ವಾಮೀಜಿ ಮತ್ತು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದರು.
ಮಾದೇಗೌಡ ಅವರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿ ಹೆಸರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ಬರೆದಿದ್ದರು. ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಮೋಸವಾಗಿದೆ ಎಂದು ಅವರು ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅಧಿಕಾರಕ್ಕಿಂತ ಕಾವೇರಿ ರಕ್ಷಣೆಯೇ ಮುಖ್ಯ ಎಂದು ಅವರು ಸಾರಿದ್ದರು.
ಕ್ಷೇತ್ರ ಪುನರ್ ವಿಂಗಡಣೆಯ ನಂತರ ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ವಿಲೀನಗೊಂಡಿತ್ತು. ಅನಂತರ 1989, 1995ರಲ್ಲಿ 2 ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 1980–83ರವರೆಗೆ ಸಿಎಂ ಗುಂಡೂರಾವ್ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು.



