ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ‌ಅಮಿತ್ ಮಾಳವೀಯ ವಿರುದ್ಧ ಎಫ್.ಐ.ಆರ್

3 years ago

ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ‌ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ನೀಡಿರುವ ದೂರು ಆಧರಿಸಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿಯ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥ ಅಮಿತ್‌ ಮಾಳವೀಯ ಅವರು ಜೂನ್‌ 17ರಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಿರುಚಿದ ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿದೇಶಗಳಿಗೆ ಹೋಗಿ ಭಾರತದ ವಿರುದ್ಧ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡಿರುವವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕ್ರಮ ಜರುಗಿಸಬೇಕು ಎಂದು ಪ್ರಿಯಾಂಕ್ ಖರ್ಗೆ ದೂರು ಸಲ್ಲಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿಯ ಜಾಲತಾಣದಲ್ಲಿ ಅಮಿತ್ ಮಾಳವೀಯ ವಿಡಿಯೋ ಹಂಚಿಕೆ ಮಾಡಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆ ವಿಡಿಯೋದಲ್ಲಿ ಹೇಳಲಾಗಿದೆ ಮತ್ತು ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲಾ ಅವರು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಸುಳ್ಳು ಫ್ಯಾಕ್ಟರಿಯನ್ನು ನಾವು ಬಂದ್ ಮಾಡುತ್ತೇವೆ. ಹೋದ ಸಲ ಅವರ ಸರ್ಕಾರದಲ್ಲಿ ಅವರ ಆಟ ನಡೆದಿತ್ತು. ಯಾರು ಶಾಂತಿ ಕದಡುವ ಪ್ರಯತ್ನ ಮಾಡುತ್ತಾರೆ ಅವರ ವಿರುದ್ದ ಕಾನೂನು ಚೌಕಟ್ಟಿನ ಅಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

Leave a Reply