ಬೆಳಗಾವಿ: ಮುಂದಿನ ಆರ್ಥಿಕ ವರ್ಷದಿಂದ ಸರ್ಕಾರ ಹಾಗೂ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಿಸುವ ಯೋಜನೆಯನ್ನು ಆರಂಭಿಸುವುದಾಗಿ ಶ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾದಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಅವರ ಪ್ರಶ್ನೆಗೆ ಉತ್ತರಿಸಿದ ಮಧು ಬಂಗಾರಪ್ಪ, ಹಿಂದಿನ ಸರ್ಕಾರ ಯೋಜನೆಯನ್ನು ಸ್ಥಗಿತಗೊಳಿಸಿದೆ. ತಾವು ಭೇಟಿ ನೀಡಿದ ಹಲವು ಶಾಲೆಗಳಲ್ಲಿ ಈ ರೀತಿಯ ಬೇಡಿಕೆಗಳು ಕೇಳಿಬಂದಿವೆ. ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯಿಂದ ಅನುಕೂಲವಾಗಲಿದೆ. ಅದರಲ್ಲೂ ಗ್ರಾಮೀಣ ಭಾಗ ಮತ್ತು ಕಡಿಮೆ ಅಂತರದ ಶಾಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯವಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ಬಜೆಟ್ನಲ್ಲಿ ಚರ್ಚೆ ಮಾಡಿ ಯೋಜನೆಯನ್ನು ಮರು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಸದನದಲ್ಲಿ ಭರವಸೆ ನೀಡಿದರು.
ಶಾಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಬಸ್ ಸೌಲಭ್ಯ ಒದಗಿಸಲಾಗುತ್ತಿದೆ. ಉಚಿತ ಬಸ್ ಪಾಸ್ಗಳಿವೆ. ಮುಂದುವರೆದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಲ್ಲಿ ತಮ್ಮ ವ್ಯಾಪ್ತಿಯನ್ನೂ ಮೀರಿದ ಶಾಲೆಗಳಿಗೆ ಪ್ರಯಾಣಿಸಲು ಪ್ರತಿ ತಿಂಗಳಿಗೆ 600 ರೂ. ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದರು.
ಕಾಂಗ್ರೆಸ್ನ ಯು.ಬಿ. ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ಕೊರತೆಯನ್ನು ನೀಗಿಸಲು ಒಟ್ಟಾರೆಯಾಗಿ 7098 ಶಾಲೆಗಳಲ್ಲಿ 9604 ಕೊಠಡಿಗಳ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಆಯವ್ಯಯದಲ್ಲಿ ಒದಗಿಸಲಾದ ಅನುದಾನ ಲಭ್ಯತೆಗೆ ಅನುಗುಣವಾಗಿ ಹಂತಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಅಗತ್ಯ ಕ್ರಮ ವಹಿಸಲಾಗುವುದು ಎಂದರು.




