ಬೆಂಗಳೂರು: ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವುದಾಗಿ ನೀಡಿದ್ದ ಭರವಸೆಯನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸರ್ಕಾರಿ ನೌಕರರ ನೂತನ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ, ತಾಲ್ಲೂಕು ಶಾಖೆಗಳ ನಿರ್ದೇಶಕರ ಪದಾಧಿಕಾರಿಗಳ ಸಮಾವೇಶದಲ್ಲಿ ಆನ್ಲೈನ್ ಮೂಲಕ ಮಾತನಾಡಿದ ಅವರು, 2006 ರ ಏಪ್ರಿಲ್ 1ರ ನಂತರ ನೇಮಕವಾಗಿರುವವರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಸರ್ಕಾರಿ ನೌಕರರ ಬೇಡಿಕೆಯ ಸಾಧಕ-ಬಾಧಕಗಳ ಅಧ್ಯಯನಕ್ಕೆ ಸಮಿತಿಯನ್ನು ರಚಿಸಲಾಗಿದೆ. ಅದು ಕೊನೆಯ ಹಂತದ ಸಭೆ ನಡೆಸಿದೆ ಎಂದರು.
ಈ ಸಮಿತಿಯ ವರದಿ ಬಂದ ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿ ಜಾರಿಗೊಳಿಸಲಾಗುವುದು. ಅದೇ ರೀತಿ 2015 ರಲ್ಲಿ ನಗದು ರಹಿತ ಜ್ಯೋತಿ ಸಂಜೀವಿನಿ ಯೋಜನೆಯನ್ನು 7 ಗಂಭೀರ ಕಾಯಿಲೆಗಳಿಗೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದು, ಶೀಘ್ರವಾಗಿ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ 1 ಕೋಟಿ ರೂ. ಸಾಲಸೌಲಭ್ಯ ಯೋಜನೆಯನ್ನು ಜಾರಿಗೊಳಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದರು.
ಸರ್ಕಾರಿ ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಬೇಕು. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕಾಯುಕ್ತ ಬಿ.ಎಸ್.ಪಾಟೀಲ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ, ಸಂಘದ ಪದಾಧಿಕಾರಿಗಳು ಮೊದಲಾದವರು ಹಾಜರಿದ್ದರು.




