ಕಾಂಗ್ರೆಸ್ ಸರ್ಕಾರ ಇರುವವರೆಗೆ ಗ್ಯಾರಂಟಿ ಯೋಜನೆಗಳು ಗ್ಯಾರಂಟಿ: ಸಂತೋಷ್ ಲಾಡ್

2 years ago

ಬಳ್ಳಾರಿ: ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, . ನಮ್ಮ ಸರ್ಕಾರದ ಅವಧಿ ಇರುವವರೆಗೂ ಗ್ಯಾರಂಟಿ ಯೋಜನೆಗಳನ್ನು ಪ್ರತಿ ವರ್ಗದ ಜನರಿಗೂ ತಲುಪಿಸುತ್ತೇವೆ. ಅದಕ್ಕೆ ನಾವೇ ಗ್ಯಾರಂಟಿ ಎಂದರು.

ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು 58,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸಲಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯ ಸರ್ಕಾರ ಉಚಿತ ಐದು ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದಂತೆ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಇತರೆ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿಯೂ ಜನರ ಮನವರಿಕೆ ಮಾಡಿಕೊಡುವ ಕೆಲಸ ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಮತ್ತು ಶಾಸಕರು ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ 26 ಲಕ್ಷ ರೈತರ ಖಾತೆಗೆ 2000 ರೂ. ನಂತೆ ಬರ ಪರಿಹಾರ ಹಣ ವರ್ಗಾವಣೆ ಮಾಡಲಾಗಿದೆ. ಇನ್ನುಳಿದ 3 ರಿಂದ 4 ಲಕ್ಷ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ ಮಾಡಲಾಗುವುದು ಮತ್ತು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ನಿರೀಕ್ಷಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮತಿ ದೊರೆತ ತಕ್ಷಣ ಕೇಂದ್ರದಿಂದ ಶೇ.88 ರಷ್ಟು ಅನುದಾನ ಮತ್ತು ರಾಜ್ಯ ಸರ್ಕಾರದಿಂದ ಶೇ.12 ರಷ್ಟು ಅನುದಾನ ಸಹಭಾಗಿತ್ವದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದರು.

ಈ ಭಾಗದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲೆಯಲ್ಲಿ ಅಪೇರಲ್ ಪಾರ್ಕ್, ಜೀನ್ಸ್ ಪಾರ್ಕ್ ನಿರ್ಮಾಣ ಕುರಿತು, ಮುಖ್ಯಮಂತ್ರಿಗಳ ಗಮನ ಸೆಳೆದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ ಸೇರಿದಂತೆ ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳು ಮೊದಲಾದವರು ಹಾಜರಿದ್ದರು.

Leave a Reply