ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯ 2ನೇ ದಿನವೂ ಗೊಂದಲದ ಗೂಡಾಗಿ ಪರಿಣಮಿಸಿದ್ದು ತಾಂತ್ರಿಕ ಕಾರಣಗಳಿಂದಾಗಿ ಗಣತಿದಾರರು ಪರದಾಡುವಂತಾಯಿತು.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಮತ್ತೊಂದೆಡೆ ಗಣತಿ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಜಾತಿ ಗಣತಿ ಪ್ರಶ್ನಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಅಖಿಲ ಭಾರತ ವೀರಶೈವ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ ಮತ್ತು ಹಿರಿಯ ವಕೀಲ ಕೆ.ಎನ್.ಸುಬ್ಬಾರೆಡ್ಡಿ ಸೇರಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ಸಿ.ಎಂ.ಜೋಶಿ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಾದ ಪ್ರಭುಲಿಂಗ ಕೆ.ನಾವದಗಿ, ಅಶೋಕ ಹಾರನಹಳ್ಳಿ, ಜಯಕುಮಾರ್ ಎಸ್.ಪಾಟೀಲ್, ವಿವೇಕ್‌ರೆಡ್ಡಿ, ಎಸ್.ಶ್ರೀರಂಗ ಮತ್ತು ಎಸ್.ಎಂ.ಚಂದ್ರಶೇಖರ್ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಹಿಂದುಳಿದ ವರ್ಗಗಳ ಆಯೋಗದ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಮತ್ತು ರಾಜ್ಯ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರತಿಮಾ ಹೊನ್ನಾಪುರ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಜರಿದ್ದರು.
ವಿಚಾರಣೆ ಸಮಯದಲ್ಲಿ ನ್ಯಾಯ ಪೀಠ ದತ್ತಾಂಶ ರಕ್ಷಣೆಗೆ ಏನು ಕ್ರಮಕೈಗೊಳ್ಳಲಾಗಿದೆ ಎಂದು ಪೀಠ ಪ್ರಶ್ನೆ ಮಾಡಿದಾಗ ಹಿಂದುಳಿದ ವರ್ಗಗಳ ಆಯೋಗದ ಪರ ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರು, ಜನರನ್ನು ಪತ್ತೆ ಮಾಡಲು ಮಾತ್ರ ಆಧಾರ್ ಬಳಕೆ ಮಾಡಲಾಗುತ್ತಿದೆ. ಎಲ್ಲಾ ದತ್ತಾಂಶವನ್ನು ಸ್ವಇಚ್ಛೆಯಿಂದ ಜನ ನೀಡಬಹುದಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ರಾಜ್ಯದಾದ್ಯಂತ ಸಮೀಕ್ಷೆ ನಡೆಸಲಾಗುತ್ತಿದೆ. ಇದರಲ್ಲಿ ಎಲ್ಲಾ ಜಾತಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಇರುವ, ಇಲ್ಲದಿರುವ, ಊಹೆಯ ಜಾತಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಸಮೀಕ್ಷೆಯ ಹ್ಯಾಂಡ್‌ಬುಕ್ ನೋಡಿದರೆ ಇದು ಗಣತಿ ಎಂದೇ ಕಾಣುತ್ತದೆ. ಇದು ಗಣತಿ ಕಾಯಿದೆ ಅಡಿ ಕೇಂದ್ರ ಸರ್ಕಾರಕ್ಕೆ ಬರುವ ವಿಚಾರ. ಸಮೀಕ್ಷೆ ಕಾನೂನುಬಾಹಿರ ಎಂದು ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಪೀಠಕ್ಕೆ ತಿಳಿಸಿದರು.
ಜಾತಿ ಸಮೀಕ್ಷೆಯೂ ಗಣತಿಯ ಭಾಗ ಎಂದು ಕೇಂದ್ರ ಸರ್ಕಾರ ಹೇಳಿದೆ. 2027ಕ್ಕೆ ಜನಗಣತಿ ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಹಿಂದಿನ ಸಮೀಕ್ಷೆಗೆ ರಾಜ್ಯ ಸರ್ಕಾರ 150 ಕೋಟಿ ರೂಪಾಯಿ ಖರ್ಚು ಮಾಡಿದೆ. 1500ಕ್ಕೂ ಅಧಿಕ ಜಾತಿಗಳನ್ನು ಉಲ್ಲೇಖಿಸಲಾಗಿದೆ. ಇಷ್ಟು ಜಾತಿಗಳ ಬಗ್ಗೆ ಯಾವುದೇ ಅಧ್ಯಯನ ನಡೆದಿಲ್ಲ. ಹೊಸದಾಗಿ ಜಾತಿಗಳನ್ನು ಸೃಷ್ಟಿಸಲಾಗಿದೆ. ಇಲ್ಲಿ ನಕಲಾಗುವ ಸಾಧ್ಯತೆ ಇದೆ. ಇದರಿಂದ ದೋಷಪೂರಿತ ದತ್ತಾಂಶ ಸಂಗ್ರಹವಾಗುವ ಸಾಧ್ಯತೆ ಇದೆ ಎಂದು ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು.
ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಾದದಲ್ಲಿ ಹುರುಳಿರುವಂತಿದೆ. ಆದರೂ, ಎಲ್ಲಾ ಅರ್ಜಿದಾರರೂ ಸಂಕ್ಷಿಪ್ತ ವಿವರಣೆಯ ತಮ್ಮ ಲಿಖಿತ ಸಾರಾಂಶ ಸಲ್ಲಿಸಲಿ, ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಇನ್ನು ಸಮೀಕ್ಷೆ ನಡೆಸುತ್ತಿರುವ ಗಣತಿದಾರರು ತಾಂತ್ರಿಕ ಸಮಸ್ಯೆ ಸೇರಿದಂತೆ ಹಲವಾರು ಕಾರಣಗಳಿಂದ ಪರದಾಡುತ್ತಿದ್ದಾರೆ. ಅನೇಕ ಗಣತಿದಾರರಿಗೆ ಆಯೋಗ ಮುದ್ರಿಸಿರುವ ಕೈಪಿಡಿಯೇ ತಲುಪಿಲ್ಲ. ಕೈಪಿಡಿಗಳಲ್ಲಂತೂ ತಪ್ಪುಗಳ ಸಾಮ್ರಾಜ್ಯವೇ ಇದೆ ಎಂದು ಆಪಾದಿಸಿದ್ದಾರೆ.
ತಾಂತ್ರಿಕ ಕಾರಣಗಳಿಂದಾಗಿ ಆಧಾರ ಸಂಖ್ಯೆ ಜೋಡಣೆಯಾಗಿರುವ ಮೊಬೈಲ್ ನಂಬರ್‌ಗೆ ಓಟಿಪಿ ರವಾನೆಯಾಗುತ್ತಿಲ್ಲ. ಪ್ರತಿಯೊಬ್ಬ ಸಮೀಕ್ಷಾದಾರರಿಗೂ ಸುಮಾರು 50 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಸರಾಸರಿ ದಿನವೊಂದಕ್ಕೆ ಕನಿಷ್ಠ 10 ಮನೆಗಳನ್ನು ಸಮೀಕ್ಷೆ ಮಾಡುವ ಅನಿವಾರ್ಯತೆ ಇದೆ. ಆದರೆ ಓಟಿಪಿ ರವಾನೆಯಾಗದೆ ವಿಳಂಬವಾಗುತ್ತಿರುವುದರಿಂದ ಹಾಗೂ ಮೊಬೈಲ್ ಆ್ಯಪ್ ಹ್ಯಾಂಗ್ ಆಗುತ್ತಿರುವುದರಿಂದ ನಿಗದಿತ ಸಮಯಕ್ಕೆ ಸಮೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
ಓಟಿಪಿ ಬರದೆ ಗ್ರಾಮೀಣ ಭಾಗದಲ್ಲಿ ಸಮೀಕ್ಷೆ ನಡೆಸಲಾಗದೆ ಶಿಕ್ಷಕರು, ಆಶಾ ಕಾರ್ಯಕರ್ತರು ಪರದಾಡುತ್ತಿದ್ದಾರೆ. ಸಮೀಕ್ಷಾದಾರರು ಭೇಟಿ ನೀಡುವ ಮೂರು ದಿನ ಮುಂಚಿತವಾಗಿಯೇ ಪ್ರಶ್ನಾವಳಿಗಳ ನಮೂನೆಗಳನ್ನು ಮನೆ ಮನೆಗಳಿಗೆ ತಲುಪಿಸಲಾಗುವುದೆಂದು ಆಯೋಗ ಹೇಳಿತ್ತು. ಆದರೆ ಎಲ್ಲಿಯೂ ಪ್ರಶ್ನಾವಳಿಗಳನ್ನು ತಲುಪಿಸಿದ ಉದಾಹರಣೆ ಇಲ್ಲ. ಇನ್ನೂ ಮನೆಗಳಿಗೆ ಯುಎಚ್‌ಐಡಿ ಸ್ಟಿಕ್ಕರ್ ಅಂಟಿಸುವುದರಲ್ಲೂ ಪೂರ್ಣ ಪ್ರಮಾಣದ ಪ್ರಗತಿಯಾಗಿಲ್ಲ.


