ಬೆಂಗಳೂರು: ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಸಂಸತ್ ಗೆ ಆಯ್ಕೆಯಾಗಿರುವ ಮಾಜಿ ಸಿಎಂಗಳಾದ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ತುಕಾರಾಂ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ನಿಯಮಗಳ ಪ್ರಕಾರ ಯಾವುದೇ ಒಬ್ಬ ಅಭ್ಯರ್ಥಿ ಏಕಕಾಲಕ್ಕೆ ಎರಡು ಸದನಗಳ ಸದಸ್ಯರಾಗುವಂತಿಲ್ಲ. ನಿಗದಿತ ಅವಧಿಯಲ್ಲಿ ಯಾವುದಾದರೂ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿ, ಒಂದು ಸದನದ ಸದಸ್ಯರಾಗಬೇಕೆಂಬ ನಿಯಮವಿದೆ. ಈ ಹಿನ್ನೆಲೆಯಲ್ಲಿ ಮೂವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ ಗೆಲುವಿನ ನಂತರ ಕೇಂದ್ರ ಮಂತ್ರಿಯಾಗಿದ್ದಾರೆ. ಕೇಂದ್ರ ಮಂತ್ರಿಯಾದ ನಂತರ ಬೆಂಗಳೂರಿಗೆ ಬಂದ ಅವರಿಗೆ ನಿನ್ನೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದ್ದರು.
ಇಂದು ಅವರು, ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಶಿಗ್ಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೂಡಾ ಸಭಾಧ್ಯಕ್ಷರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಸಂಡೂರು ಕ್ಷೇತ್ರದ ಶಾಸಕ ಇ.ತುಕಾರಾಂ ಅವರು ಸಭಾಧ್ಯಕ್ಷರ ಸೂಚನೆಯ ಮೇರೆಗೆ ನಿನ್ನೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಜೊತೆಗೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೂಡಾ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಇವರು ಸಂಸತ್ತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.
ಈ ನಾಲ್ವರ ರಾಜಿನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನ ಹಾಗೂ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಸದ್ಯದಲ್ಲೇ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ.




