ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ: ಎಚ್.ಡಿ.ಕುಮಾರಸ್ವಾಮಿ

5 years ago

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ… ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು.

ನಿನ್ನೆ ನಡೆದ ನಿಮ್ಹಾನ್ಸ್ ನ 25ನೇ ಘಟಿಕೋತ್ಸವದಲ್ಲಿ ಕನ್ನಡ ಭಾಷೆಗೆ 3ನೇ ಸ್ಥಾನ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ ಎಂದು ಕಿಡಿಕಾರಿದ್ದಾರೆ.

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೆಗುಂಪು ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಎಂದಿದ್ದಾರೆ.

ಸ್ವಾಭಿಮಾನಿ ಕನ್ನಡಿರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದಿರುವ ಅವರು, #ನಮ್ಮಕನ್ನಡ #ನಮ್ಮಕರ್ನಾಟಕ ಹ್ಯಾಷ್ ಟ್ಯಾಗ್ ಅಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

Leave a Reply