ಅಂಗನವಾಡಿ ಕಾರ್ಯಕರ್ತರ ಕುರಿತು ಸದನದಲ್ಲಿ ಪ್ರಸ್ತಾಪಿಸಲಾಗುವುದು: ಎಚ್.ಡಿ.ಕುಮಾರಸ್ವಾಮಿ

5 years ago

ಬೆಂಗಳೂರು: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಸಮಿತಿ ಮುಖಂಡರು ಇಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮನವಿ ಸಲ್ಲಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಬಂಧಿತ ಸಚಿವರ ಜತೆ ಮಾತುಕತೆ ನಡೆಸಲಾಗುವುದು. ಈ ಬಗ್ಗೆ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡಲಾಗುವುದು ಎಂದಿದ್ದಾರೆ.

ಅನೇಕ ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು ನೆನೆಗುದಿಗೆ ಬಿದ್ದಿವೆ. ಅವುಗಳನ್ನು ಈಡೇರಿಸಲೇಬೇಕು. ರಾಜ್ಯದಲ್ಲಿ 47.37 ಲಕ್ಷದಷ್ಟು ಅಂಗನವಾಡಿ ಕಾರ್ಯಕರ್ತೆಯರಿದ್ದು, ಕೋವಿಡ್‌ ಸೋಂಕಿನ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಆ ವಿಷಮ ಪರಿಸ್ಥಿತಿಯಲ್ಲಿ 59 ಕಾರ್ಯಕರ್ತೆಯರು ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ಅನೇಕರು ಸೋಂಕಿನ ಸಾವಿನ ದವಡೆಯಿಂದ ಪಾರಾಗಿದ್ದಾರೆ ಎಂದಿದ್ದಾರೆ.

ಸರಕಾರ ಮಾನವೀಯ ನೆಲೆಗಟ್ಟಿನಲ್ಲಿ ಇವರ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರನ್ನು ನಿರ್ಲಕ್ಷ್ಯ ಮಾಡುವುದು ಬೇಡ. ಅವರ ಗೌರವ ಧನ ಹೆಚ್ಚಳ ಮಾಡುವುದರ ಜತೆಗೆ, ಎನ್‌ ಪಿ ಎಸ್‌ ವಂಚಿತರಾಗಿ ನಿವೃತ್ತಿಯಾದ ಎಲ್ಲರಿಗೂ ಪರಿಹಾರ ನೀಡಬೇಕು. ಅದಕ್ಕೆ ಅಗತ್ಯವಾದ 339.49 ಲಕ್ಷ ರೂ.ಗಳನ್ನು ಬಜೆಟ್‌ʼನಲ್ಲಿ ತೆಗೆದಿರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Leave a Reply