ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಶಾಲಾ-ಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ತೀವ್ರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಬೆಂಗಳೂರಿನ ರಸ್ತೆಗಳು ಅಕ್ಷರಶಃ ಕೆರೆಗಳಾಗಿ ಮಾರ್ಪಟ್ಟಿದ್ದು, ಹಲವು ಕಡೆ ಮನೆಗಳಿಗೆ ನೀರು ನುಗ್ಗಿ ಜನ ಸಂಕಟದಲ್ಲಿ ಸಿಲುಕಿದ್ದಾರೆ.
ಬೆಂಗಳೂರು ನಗರ ಜಿಲ್ಲಾಡಳಿತ, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆಗಸ್ಟ್ 30ರ ಮಂಗಳವಾರ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿರುವುದಾಗಿ ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಬೈಲಾಂಜನಪ್ಪ ಹೇಳಿದ್ದಾರೆ.
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಮಲ್ಲೇಶ್ವರಂನ ಕೆಲ ರಸ್ತೆಗಳಲ್ಲಿ ನೀರುನಿಂತಿದೆ. ವಾಹನ ಸವಾರರು ಸಂಚರಿಸಲು ಹರಸಾಹಸಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಾಯಂಡಳ್ಳಿ, ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ಬಹುತೇಕ ಅಂಡರ್ ಪಾಸ್ ಗಳಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿದೆ.




