ಆನ್ಲೈನ್ ತರಗತಿ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ

4 years ago

ಬೆಂಗಳೂರು: ಹಿಜಾಬ್ – ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್‌ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.

ಉಡುಪಿಯಲ್ಲಿ ಆರಂಭವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಾಂಕ್ರಾಮಿಕ ರೋಗದಂತೆ ವ್ಯಾಪಿಸಿರುವ ಹಿಜಬ್-ಶಾಲು ವಿವಾದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದಿದ್ದಾರೆ.

ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ ಎಂದಿದ್ದಾರೆ.

ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಬಣಗೊಳಿಸಿರುವ ರಾಜ್ಯ ಸರ್ಕಾರ ಈಗ ಪರಿಸ್ಥಿತಿ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಎಂದಿದ್ದಾರೆ.

ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ‌ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶಿಸಿ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ತಕ್ಷಣ ಶುರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Leave a Reply