ಬೆಂಗಳೂರು: ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡಿಕೊಂಡು ಬರಲು ಕಟ್ಟೆಚ್ಚರ ವಹಿಸುವಂತೆ, ಗೃಹ ಸಚಿವ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಒಂದಕ್ಕೆ ಕೆಲವು ಕಿಡಿಗೇಡಿಗಳು, ಕಲ್ಲು ತೂರಾಟ ನಡೆಸಿದ ಘಟನೆಯ ಹಿನ್ನೆಲೆಯಲ್ಲಿ, ಅವರು, ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿ, ಶಾಂತಿ ಸೌಹಾರ್ದತೆ ಕಾಪಾಡಲು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ (ಒಳಾಡಳಿತ) ರಜನೀಶ್ ಗೋಯಲ್ ಅವರು, ಮಹಾರಾಷ್ಟ್ರ ರಾಜ್ಯ ಮುಖ್ಯ ಕಾರ್ಯದರ್ಶಿ ಯವರ ದೂರವಾಣಿ ಕರೆ ಮೂಲಕ ಸಂಪರ್ಕಿಸಿ, ಘಟನೆಯ ಬಗ್ಗೆ ಚರ್ಚಿಸಿದ್ದಾರೆ.
ಗಡಿ ಭಾಗದ ಜಿಲ್ಲೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಮುನ್ನೆಚ್ಚರಿಕೆ ಕ್ರಮವಾಗಿ, ಎರಡೂ ರಾಜ್ಯಗಳ, ಹಿರಿಯ ಪೊಲೀಸ್ ಅಧಿಕಾರಿಗಳೂ ಸಭೆ ನಡೆಸಲಿದ್ದಾರೆ, ಎಂದೂ ಗೃಹ ಸಚಿವ ಹೇಳಿದ್ದಾರೆ.
ಕಲ್ಲು ತೂರಾಟ: ಈ ನಡುವೆ ಗಡಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ರಾಜ್ಯ ರಸ್ತೆ ಸಾರಿಗೆ ಮತ್ತು ಇತರೆ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡಸಿದ ಘಟನೆಗಳು ವರದಿಯಾಗಿವೆ.ಈ ಘಟನೆ ಹಿನ್ನೆಲೆಯಲ್ಲಿ ಗಡಿ ಭಾಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತಾ ಕ್ರಮ ಕೈಗೊಂಡಿದ್ದಾರೆ.
ನಿಪ್ಪಾಣಿ ಪಟ್ಟಣದ ಬಸ್ ನಿಲ್ದಾಣ ಹಾಗೂ ಪಟ್ಟಣದಲ್ಲಿ ಮಹಾರಾಷ್ಟ್ರದ ಬಸ್‌ಗಳು ನಿಲ್ಲುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಪ್ರತೀಕಾರ ಕ್ರಮವಾಗಿ ಮಹಾರಾಷ್ಟ್ರ ಬಸ್‌ಗಳಿಗೆ ಕಪ್ಪು ಮಸಿ ಬಳಿಯದಂತೆ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆಯನ್ನೂ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 4ರ ಕೊಗನೊಳ್ಳಿ ಟೋಲ್‌ಗೇಟ್ ಬಳಿಯೂ ಬಿಗಿಭದ್ರತೆ ಒದಗಿಸಲಾಗಿದೆ.
ಬಸ್ ಸಂಚಾರ ಸ್ಥಗಿತ: ಘಟನೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿ ಹಾಗೂ ರಾಜ್ಯದ ವಿವಿಧ ಭಾಗಗಳಿಗೆ ಬರುವ 300ಕ್ಕೂ ಹೆಚ್ಚು ಬಸ್‌ಗಳ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ, ಬಾಗಲಕೋಟೆ ಜಿಲ್ಲೆಯ ವಿವಿಧೆಡೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ 44ಕ್ಕೂ ಹೆಚ್ಚು ಬಸ್‌ಗಳನ್ನು ಗಡಿ ಭಾಗದ ಕಾಗವಾಡದವರೆಗೆ ಮಾತ್ರ ಓಡಿಸಲಾಗುತ್ತಿದೆ.
ಮಹಾರಾಷ್ಟ್ರದ ಶಿವಸೇನಾ ಕಾರ್ಯಕರ್ತರ ಪುಂಡಾಟಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆ ಖಂಡಿಸಿ ಕನ್ನಡಪರ ಸಂಘಟನೆಗಳು ಬಾಗಲಕೋಟೆ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆ ಗುರುವಾರ ಪ್ರತಿಭಟನೆ ನಡೆಸಿದರು.
ಭಾವಚಿತ್ರ ಸುಟ್ಟು ಆಕ್ರೋಶ: ಚಾಮರಾಜನಗರದಲ್ಲಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.




