ಕೋಚಿಮುಲ್ ನೇಮಕಾತಿಯಲ್ಲಿ ಭಾರಿ ಅಕ್ರಮ: ಕೆ.ಸುಧಾಕರ್

2 years ago

ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ರದ್ದು ಮಾಡಿದ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಬಣ್ಣ ಬಯಲಾಗಿದೆ ಎಂದು ಮಾಜಿ ಆರೋಗ್ಯ ಸಚಿವ ಕೆ.ಸುಧಾಕರ್ ಆರೋಪಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ಅವರನ್ನು ಶಿಫಾರಸ್ಸು ಮಾಡಿದ ವ್ಯಕ್ತಿಗಳ ಹೆಸರನ್ನು ಸಹ ನಮೂದಿಸಿರುವುದನ್ನು ಗಮನಿಸಿದರೆ ನೇಮಕಾತಿ ಎಷ್ಟು ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಈ ಇಡೀ ನೇಮಕಾತಿ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣವೆಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಪ್ರಾಮಾಣಿಕ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಕೂಡಲೇ ರದ್ದು ಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನ ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರದ್ದು ಮಾಡಿತು. ಜಿಲ್ಲೆ ರಚನೆಯಾದ 16 ವರ್ಷಗಳ ನಂತರ ಚಿಕ್ಕಬಳ್ಳಾಪುರಕ್ಕೆ ಒಂದು ಪ್ರತ್ಯೇಕ ಹಾಲು ಒಕ್ಕೂಟ ದಕ್ಕಿತೆಂದು ಸಂಭ್ರಮಿಸುವ ಮೊದಲೇ ಕಾಂಗ್ರೆಸ್ ಸರ್ಕಾರ ರೈತರ ಕನಸನ್ನು ನುಚ್ಚು ನೂರು ಮಾಡಿತು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಹಾಲು ಉತ್ಪಾದನೆ ಮಾಡುವ ಪ್ರಮುಖ ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಮುಂಚೂಣಿಯಲ್ಲಿದ್ದು ಹೈನುಗಾರಿಕೆಯಿಂದಲೇ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಜಿಲ್ಲೆಯಲ್ಲಿ ಒಟ್ಟು ಸುಮಾರು 1.75 ಲಕ್ಷ ರಾಸುಗಳಿದ್ದು ಜಿಲ್ಲೆಯ ಐದು ತಾಲ್ಲೂಕುಗಳಿಂದ ಪ್ರತಿನಿತ್ಯ ಸುಮಾರು 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ ಎಂದು ಹೇಳಿದ್ದಾರೆ.

2 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50,000 ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಕೂಡ ಪ್ರತ್ಯೇಕ ಹಾಲು ಒಕ್ಕೂಟಗಳಿದ್ದರೂ ಚಿಕ್ಕಬಳ್ಳಾಪುರಕ್ಕೆ ಮಾತ್ರ ಪ್ರತ್ಯೇಕ ಒಕ್ಕೂಟ ನೀಡದೆ ಕಾಂಗ್ರೆಸ್ ಪಕ್ಷ ದಶಕಗಳಿಂದ ಜಿಲ್ಲೆಯ ರೈತರಿಗೆ, ಹೈನುಗಾರಿಕೆ ಉದ್ಯಮಕ್ಕೆ ಅನ್ಯಾಯ ಮಾಡುತ್ತಾ ಬಂದಿತ್ತು ಎಂದಿದ್ದಾರೆ.

ಆಡಳಿತಾತ್ಮಕ ದೃಷ್ಟಿಯಿಂದ, ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತ್ಯೇಕ ಒಕ್ಕೂಟವನ್ನ ಧಿಡೀರನೆ ನಿಲ್ಲಿಸಿ, ಬಿಜೆಪಿ ಸರ್ಕಾರದ ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸಕ್ಕೆ ಕೈಹಾಕಿತು ಎಂದು ಹೇಳಿದ್ದಾರೆ.

ಈ ನೇಮಕಾತಿ ಹಗರಣ ಗಮನಿಸಿದರೆ, ಪ್ರತ್ಯೇಕ ಒಕ್ಕೂಟವನ್ನ ವಿರೋಧಿಸುವ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ದುರುದ್ದೇಶ ಏನೆಂದು ಅರ್ಥವಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅಪಾರದರ್ಶಕವಾಗಿದ್ದು, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದ್ದರಿಂದ ಈ ನೇಮಕಾತಿಯನ್ನು ಈ ಕೂಡಲೇ ರದ್ದು ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply