ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಒಕ್ಕೂಟ ಇಂದು ರಾಜಭವನ ಮುತ್ತಿಗೆ ಹಾಕಲು ಯತ್ನಿಸಿತು.
ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್, ಕರವೇ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಸೇನೆಯ ಕೆ.ಆರ್.ಕುಮಾರ್ ಅನೇಕರು ಭಾಗವಹಿಸಿದ್ದರು. ರಾಜಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ನಾಯಕರನ್ನು ಪೊಲೀಸರು ಅರ್ಧದಲ್ಲೇ ತಡೆದು ವಶಕ್ಕೆ ತೆಗೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸೆ.29 ರಂದು ಕರೆದಿರುವ ಕರ್ನಾಟಕ ಬಂದ್ ನಡೆಯಲಿದೆ. ಈ ನಿಟ್ಟಿನಲ್ಲಿ ಹಲವು ಸುತ್ತಿನ ಚರ್ಚೆಗಳಾಗಿದ್ದು, ರಾಜ್ಯಾದ್ಯಂತ ಸುಮಾರು 2 ಸಾವಿರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಲಿವೆ ಎಂದು ಹೇಳಿದರು.
ಕರ್ನಾಟಕ ಬಂದ್‍ನಲ್ಲಿ ಸಾರಿಗೆ ಸೇರಿದಂತೆ ಎಲ್ಲಾ ಚಟುವಟಿಕೆಗಳೂ ಸ್ಥಗಿತಗೊಳ್ಳಲಿವೆ. ಸುಮಾರು ಒಂದು ಲಕ್ಷ ಜನ ಪ್ರತಿಭಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ರಾಜ್ಯಸರ್ಕಾರ ಯಾವುದೇ ಒತ್ತಡ ಹಾಕಿದ್ದರೂ ನಾವು ಹೋರಾಟ ಮಾಡುವುದನ್ನು ಕೈಬಿಡುವುದಿಲ್ಲ. ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಿ ಪ್ರತಿಭಟನೆ ಹತ್ತಿಕ್ಕಲು ಯತ್ನಿಸುತ್ತಿದೆ. ಇದನ್ನು ಖಂಡಿಸುತ್ತೇವೆ ಎಂದರು.
ರಾಜ್ಯಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ನಿಷೇಧಾಜ್ಞೆ ಹೇರಿರುವುದು, ವ್ಯಾಪಕ ಬಂದೊಬಸ್ತ್ ಅನ್ನು ನೋಡಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ನಗುತ್ತಿದ್ದಾರೆ. ಕರ್ನಾಟಕ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಭಟನೆಯನ್ನು ಹತ್ತಿಕ್ಕಿ ನಮಗೆ ನೀರು ಬಿಡುತ್ತಿದ್ದಾರೆ, ಶಹಬ್ಬಾಸ್ ಎಂದು ಸ್ಟಾಲಿನ್ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.
ನಮ್ಮ ಕರ್ನಾಟಕ ಸರ್ಕಾರ ಮತ್ತು ತಮಿಳುನಾಡಿಗೆ ಅದೇನು ನೆಂಟಸ್ತನ ಇದೆಯೋ ಗೊತ್ತಿಲ್ಲ, ರಾಜ್ಯವನ್ನು ಅವರಿಗೆ ಒಪ್ಪಿಸಿಬಿಟ್ಟಂತೆ ಕಾಣುತ್ತಿದೆ. ನಮ್ಮವರು ಸ್ಟಾಲಿನ್ ಹೇಳಿದಂತೆ ಕೇಳುತ್ತಿದ್ದಾರೆ. ಒಂದು ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




