ಬಿಜೆಪಿಗರೆ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಿ: ಸಿದ್ದರಾಮಯ್ಯ

2 years ago

#BJP #really #cares #farmers #Delhi #release #money #Siddaramaiah

ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ  ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದು ತಿಳಿಸಿದರು

ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದರು.

ನಾವು ಪತ್ರ ಬರೆದ ಮೇಲೆ ಕೇಂದ್ರ ಸರ್ಕಾರ 600 ಕೋಟಿ ರೂ.ಗಳನ್ನು ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಹಣ ಬಿಡುಗಡೆ ಮಾಡಿದೆ. ಬರದಿಂದ 3300 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು    ಕಳುಹಿಸಲಾಗಿತ್ತು. ಮೂವರಿಗೆ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರ ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.

ಪ್ರಧಾನಿಗಳ ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ  ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತಾಳಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿಯವರು ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ  ನರೇಂದ್ರಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು ಎಂದರು.

ಬಿಜೆಪಿಯವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ. ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.

ಒಬ್ಬಂಟಿಗಳಾಗಿದ್ದ ಗಣಿಗಾರಿಕೆ ಅಧಿಕಾರಿ ಪ್ರತಿಮಾ ಅವರ ಕೊಲೆಯಾಗಿರುವ ಈಗಷ್ಟೇ ಗಮನಕ್ಕೆ ಬಂದಿದೆ. ಕಾರಣ ಏನೆಂದು ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆಯಾಗಿ ಸತ್ಯ ತಿಳಿಯಲಿದೆ ಎಂದು ಹೇಳಿದರು.

ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿದ್ದಾರೆ. ನಮಗೆ ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದರು. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದರು.

ಸಿಎಂ ಕುರ್ಚಿ ಬಗ್ಗೆ ಬಿಜೆಪಿಯವರು ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದರು.

ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. ಹಿಂದೆ ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

Leave a Reply