ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು: ಈಶ್ವರ್ ಖಂಡ್ರೆ
ಬೆಂಗಳೂರು: ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು.
ಆದರೆ ಕಾಂತಾರಾ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ. ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು ಕ್ರಮ ಜರುಗಿಸಲು ಸೂಚಿಸಿದ್ದೇನೆ ಎಂದರು.
ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್.ಎಂ.ಟಿ.ಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆ ಮೇಲೆ ಎಫ್.ಐ.ಆರ್. ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.




