ಜನ ಸಾಮಾನ್ಯರ ಬಗ್ಗೆ ನಿಜವಾದ ಕಳಕಳಿ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಡಿ: ಡಿ ಕೆ ಶಿವಕುಮಾರ್

1 year ago

ಬೆಂಗಳೂರು: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ಅವರು, ಬಿಜೆಪಿಯವರಿಗೆ ಜನ ಸಾಮಾನ್ಯರ ಬಗ್ಗೆ ನಿಜವಾದ ಕಳಕಳಿ ಇದ್ದರೆ ಎಲ್ ಪಿ ಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕು ಎಂದರು.

ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದರು.

ಬಿಜೆಪಿ ಜನಾಕ್ರೋಶ ಯಾತ್ರೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗೃಹ ಸಚಿವ ಪರಮೇಶ್ವರ್ ಕೇಂದ್ರ ಸರ್ಕಾರ ಅಡುಗೆ ಸಿಲಿಂಡರ್ ಬೆಲೆ 50 ರೂ. ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಹೆಚ್ಚಳ ಮಾಡಿದೆ. ಇದಕ್ಕೆ ಮೊದಲು ಬಿಜೆಪಿಯವರು ಉತ್ತರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಜನತೆ ಗಮನಿಸುತ್ತಾರೆ ಎಂದು ನಿನ್ನೆಯೇ ಹೇಳಿದ್ದೆ. ಬಿಜೆಪಿಯವರು ಜನಾಕ್ರೋಶ ಅಂತ ಹೇಳಿದ್ದರು. ಬಿಜೆಪಿ ಆಕ್ರೋಶ ಎಂದು ನಾನು ಹೇಳಿದ್ದೆ. ಆಕ್ರೋಶ ಮಾಡಲು ಹೊರಟಿರುವ ಬಿಜೆಪಿಯವರು ಈಗ ಉತ್ತರ ಕೊಡಬೇಕು ಎಂದು ತಿರುಗೇಟು ನೀಡಿದರು.

Leave a Reply