ಅಕ್ರಮ ಬಡಾವಣೆ ನಿರ್ಮಿಸಿದರೆ ಜೈಲು ಶಿಕ್ಷೆ, ದಂಡ

2 years ago

ಬೆಂಗಳೂರು: ರಾಜ್ಯದ ಎಲ್ಲಾ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರ ಚಿಂತನೆ ಆರಂಭಿಸಿದೆ. ಈ ಕುರಿತು ಸಾಧಕಬಾಧಕಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚನೆಯಾಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ನೇತೃತ್ವದ ಸಂಪುಟ ಉಪ ಸಮಿತಿ ಇಂತಹ ಕಟ್ಟಡಗಳಿಗೆ ಒಂದು ಬಾರಿ ಎಂಬಂತೆ ದಂಡ ವಿಧಿಸಿ ಸಕ್ರಮಗೊಳಿಸುವ ಕುರಿತಂತೆ ನಿಯಮಗಳ ಪರಿಶೀಲನೆಗೆ ಮುಂದಾಗಿದೆ.

ಸಭೆಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆ ನಗರಗಳಲ್ಲಿ ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿ ರಾಜ್ಯದ್ಯಂತ ಏಕರೂಪ ತೆರಿಗೆ ವಿಧಿಸುವುದು ಸೂಕ್ತ ಎಂದರು.

ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆ ಮತ್ತು ಇತರ ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತು ಚರ್ಚೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.

ಇದಾದ ನಂತರ ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ. ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದರು.

ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವಿದೆ ಎಂದರು.

Leave a Reply