ಬೆಂಗಳೂರು: ಐಐಟಿ, ಐಐಎಂ, ಐಐಎಸ್‌ಸಿ, ಎನ್‌ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್‌ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದಿದ್ದಾರೆ.
ಎಂಬಿಬಿಎಸ್ ಪದವಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60ಕ್ಕೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಮಹತ್ವದ ಘೋಷಣೆಯನ್ನು ಸರ್ಕಾರ ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ ಎಂದಿದ್ದಾರೆ.
ಐಐಟಿ, ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕು ಎಂದು ತಿಳಿಸಿದ್ದಾರೆ.
ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.
ಬಾಬಾ ಸಾಹೇಬರ ಆಶಯದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.



