ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ಆ.16 ರಂದು ವಿಶೇಷ ಸಂಪುಟ ಸಭೆ ಕರೆಯಲು ನಿರ್ಧಾರ
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಒದಗಿಸಲು ಹೈಕೋರ್ಟ್ ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ಸಲ್ಲಿಸಿರುವ ವರದಿ ಇದೀಗ ರಾಜ್ಯ ಕಾಂಗ್ರೆಸ್ಸಿನಲ್ಲಿ ಹೊಸ ಬಿಕ್ಕಟ್ಟು ಸೃಷ್ಟಿ ಮಾಡಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಆಯೋಗದ ವರದಿಯ ಅನುಷ್ಠಾನ ಕುರಿತಂತೆ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದೆ. ಈ ವೇಳೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನಿಗದಿಪಡಿಸಿರುವ ಆಯೋಗದ ಕ್ರಮಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಪ್ರಮುಖವಾಗಿ ಅಸ್ಪೃಶ್ಯ ಸಮುದಾಯದ ಬಲಗೈ ವರ್ಗಕ್ಕೆ ಶೇಕಡ ಐದರಷ್ಟು ಮೀಸಲಾತಿ ನಿಗದಿಪಡಿಸಿರುವ ಆಯೋಗದ ಕ್ರಮಕ್ಕೆ ಸಚಿವರಾದ ಪರಮೇಶ್ವರ್ ಮತ್ತು ಮಹಾದೇವಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಪ್ರಮಾಣ ಶೇಕಡ ಏಳಕ್ಕೆ ಹೆಚ್ಚಳವಾಗಬೇಕು. ಇಲ್ಲದೆ ಹೋದಲ್ಲಿ ತಮ್ಮ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಲಿದೆ ಎಂದು ಅಳಲು ತೋಡಿಕೊಂಡಿರುವುದಾಗಿ ತಿಳಿದುಬಂದಿದೆ.
ಇನ್ನು ಸ್ಪೃಶ್ಯ ಸಮುದಾಯಕ್ಕೆ ಸೇರಿದ ಬೋವಿ, ಲಂಬಾಣಿ ಸಮುದಾಯಗಳಿಗೆ ಆಯೋಗದ ವರದಿ ದೊಡ್ಡ ನಿರಾಸೆ ಉಂಟುಮಾಡಿದೆ. ಇದನ್ನು ಅನುಷ್ಠಾನಕ್ಕೆ ತಂದಲ್ಲಿ ಈ ಸಮುದಾಯಗಳು ಕಾಂಗ್ರೆಸ್ ಪಕ್ಷದ ವಿರುದ್ಧ ನಿಲ್ಲಲಿವೆ. ಸರ್ಕಾರ ಮತ್ತು ಪಕ್ಷ ದೊಡ್ಡ ಮಟ್ಟದ ಪ್ರತಿರೋಧ ಎದುರಿಸಬೇಕಾಗಿತು ಎಂಬ ಎಚ್ಚರಿಕೆಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಈ ರೀತಿ ಸಂಪುಟ ಸಭೆಯಲ್ಲಿ ಹಲವು ಸಚಿವರು ವರದಿಯ ಬಗ್ಗೆ ಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ವರದಿಯ ಪ್ರತಿಯನ್ನು ನೀಡಿದರು.
ಇದನ್ನು ಸಮಗ್ರವಾಗಿ ಅಧ್ಯಯನ ಮಾಡಿಕೊಂಡು ಬನ್ನಿ. ಆನಂತರ ಎಲ್ಲರೂ ಇದರ ಬಗ್ಗೆ ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ತಿಳಿಸಬೇಕು. ಆ ಬಳಿಕ ಬಹುಮತದ ಆಧಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿ ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿರುವುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್ ಕೆ ಪಾಟೀಲ್, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ವರದಿ ಕುರಿತು ವಿಸ್ತೃತ ಚರ್ಚೆ ನಡೆಸಲು ಆ.16ರಂದು ವಿಶೇಷ ಸಂಪುಟ ಸಭೆ ಕರೆಯಲು ನಿರ್ಧರಿಸಲಾಗಿದೆ ಎಂದರು.




