ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಎಂದಿಗೂ ಮಹಿಳೆಯರ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟೀಕರಣ ನೀಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಗುಂಟೆ ಪಾಳ್ಯದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಇಷ್ಟು ದೊಡ್ಡನಗರಗಳಲ್ಲಿ ಅಲ್ಲೊಂದು ಇಲ್ಲೊಂದು ಇಂತಹ ಘಟನೆ ನಡೆಯುತ್ತವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಬಿಜೆಪಿ ಮತ್ತು ಕೆಲವು ಮಾಧ್ಯಮಗಳು ವಿವಾದದ ಸ್ವರೂಪ ನೀಡಿದ್ದವು. ಈ ಕುರಿತು ಪ್ರಕ್ರಿಯಿಸಿದ ಪರಮೇಶ್ವರ್ ಅವರು, ರಾಜ್ಯದಲ್ಲಿ ನಿರ್ಭಯಾ ಯೋಜನೆ ಸೇರಿದಂತೆ ಮಹಿಳಾ ಸುರಕ್ಷತೆಗೆ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇನೆ ಎಂದರು.
ದೇಶದಲ್ಲಿ ಬೇರೆ ರಾಜ್ಯಗಳಿಗಿಂತ ನಿರ್ಭಯಾ ಯೋಜನೆಯ ಅನುದಾನವನ್ನು ಹೆಚ್ಚು ಬಳಸಿಕೊಂಡು, ಅನುಷ್ಠಾನ ಮಾಡಿದ್ದೇವೆ. ನಾನು ಪ್ರತಿ ಬಾರಿ ಗೃಹ ಸಚಿವನಾದಾಗ ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಮಹಿಳಾ ಸುರಕ್ಷತೆಗೆ ಏನೆಲ್ಲ ಕ್ರಮ ಕೈಗೊಂಡಿದ್ದೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದರು.
ಒಂದು ಹೇಳಿಕೆಯನ್ನು ತಿರುಚಿ, ನನ್ನ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ. ನಾನು ಮಹಿಳೆಯರ ರಕ್ಷಣೆಗೆ ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದೇನೆ. ಮಹಿಳೆಯರ ರಕ್ಷಣೆ ಆಗಬೇಕು ಎನ್ನುವ ನಂಬಿಕೆಯಲ್ಲಿದ್ದೇನೆ. ಯಾರಿಗೆ ತೊಂದರೆ ಆದರೂ ಸಹ ನಮ್ಮ ಇಲಾಖೆಯಲ್ಲಿ ನೇರವಾಗಿ ಅನೇಕರನ್ನು ಹೊಣೆ ಮಾಡಿದ್ದೇನೆ ಎಂದರು.
ಬಿಜೆಪಿಯವರ ರಾಜಕೀಯ ಹೊರತುಪಡಿಸಿ, ಒಂದು ವೇಳೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ ಎಂದರು.
ಪ್ರತಿನಿತ್ಯ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಕಾನೂನು ಸುವ್ಯವಸ್ಥೆ ಎಡಿಜಿಪಿಯವರು ಇಲಾಖೆಯ ದೈನಂದಿನ ಮಾಹಿತಿಯನ್ನು ನೀಡಲು ಬಂದಾಗ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸುತ್ತೇನೆ. ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನೆ ಕೈಗೊಂಡಾಗಲೂ ಇದೇ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದರು.
ಬಿಜೆಪಿಯವರ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಏನೆಲ್ಲ ಆಗಿತ್ತು ಎಂಬುದನ್ನು ಅಂಕಿ ಅಂಶ ಸಮೇತ ಸದನದಲ್ಲಿ ಉತ್ತರಿಸಿದ್ದೇನೆ. ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಏನೂ ಆಗಿರಲಿಲ್ಲ. ಎಲ್ಲವೂ ಚೆನ್ನಾಗಿತ್ತು ಅಂತ ಹೇಳುವುದಕ್ಕೆ ಜನ ನಗಾಡುತ್ತಾರೆ ಎಂದರು.




