ಬೆಂಗಳೂರು: ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.
ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತ ಎನ್.ಆರ್.ಸಂತೋಷ್ ಅವರಿಗೆ ಅರಸೀಕೆರೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗೆ ಬಿಜೆಪಿ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ಬಹುತೇಕ ಎಲ್ಲರಿಗೂ ಟಿಕೆಟ್ ನೀಡಲಾಗಿದೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳು ಕೊನೆ ಕ್ಷಣದಲ್ಲಿ ಬದಲಾವಣೆಗೊಂಡಿದ್ದಾರೆ.
ಘೋಷಣೆಯಾಗಿದ್ದ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದ್ದು, ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ ಅವರ ಪುತ್ರ ದರ್ಶನ್ ಧ್ರುವ ನಾರಾಯಣ ಅವರಿಗೆ ಬೆಂಬಲ ಘೋಷಿಸಲಾಗಿದೆ. ಮೂರು ಕ್ಷೇತ್ರಗಳಲ್ಲಿ ಆರ್ಪಿಐ ಹಾಗೂ ಮೂರು ಕ್ಷೇತ್ರಗಳಲ್ಲಿ ಸಿಪಿಐಎಂಗೆ ಬಾಹ್ಯ ಬೆಂಬಲ ಘೋಷಿಸಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದರು.



