ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ: ಎಚ್.ಡಿ.ಕುಮಾರಸ್ವಾಮಿ

5 years ago

ಬೆಂಗಳೂರು: ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಿತು. 25 ಕ್ಷೇತ್ರಗಳ ಪೈಕಿ 6 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಅದರಲ್ಲೂ ಎಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ಹಾಸನದಿಂದ ಆಯ್ಕೆಯಾಗಿದ್ದಾರೆ. ಉಳಿದ 5 ಅಭ್ಯರ್ಥಿಗಳೂ ಸೋಲುಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದರು.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್‌ ಎಂದೂ ಧೃತಿಗೆಡುವುದಿಲ್ಲ ಎಂದಿದ್ದಾರೆ.

ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಚುನಾವಣೆಯ ಮತದಾರರು. ಜನರೇ ನೇರವಾಗಿ ಹಕ್ಕು ಚಲಾಯಿಸುವ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಶಕ್ತಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಲ್ಲಿ ಜೆಡಿಎಸ್‌ ಬಗೆಗಿನ ವಿಶ್ವಾಸವನ್ನು ಅಳಿಸಲಾಗದು. ಈ ಚುನಾವಣೆಯಲ್ಲಿ ಜಯ ಗಳಿಸಿದ ಎಲ್ಲ ಪಕ್ಷಗಳ ಅಭ್ಯರ್ಥಿಗಳಿಗೆ ನನ್ನ  ಶುಭಾಶಯಗಳು ಎಂದಿದ್ದಾರೆ.

Leave a Reply