ರಾಷ್ಟ್ರಧ್ವಜಕ್ಕೆ ಅವಮಾನ: ಆರೋಪ ದೂರು ದಾಖಲು

5 years ago

ಲಖ್ನೋ: ಆಗಸ್ಟ್  22ರಂದು ಲಖ್ನೋದಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಷ್ಟ್ರಧ್ವಜಕ್ಕೆ ಅವಮಾನಿಸಿದ್ದಾರೆ ಎಂದು ದೂರು ದಾಖಲಿಸಲಾಗಿದೆ.

ಸಿಕಂದರ್ ಪುರ ನಿವಾಸಿ ಚಂದ್ರ ಕಿಶೋರ್ ಪರಾಶರ್ ಮುಜಾಫರ್ ಪುರ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಕಲ್ಯಾಣ್ ಸಿಂಗ್ ಶವಸಂಸ್ಕಾರದ ಮುನ್ನ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜವನ್ನು ಇರಿಸಲಾಗಿತ್ತು. ದೇಶದ ಬಾವುಟದ ಮೇಲೆ ಬಿಜೆಪಿ ಧ್ವಜವನ್ನು ಇರಿಸುವ ಮೂಲಕ ನಡ್ಡಾ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ದೂರಿದ್ದಾರೆ.

ಬಿಜೆಪಿ ಈ ಕೃತ್ಯವನ್ನು ಉದ್ದೇಶಪೂರ್ವಕವಾಗಿ ಮಾಡಿದೆ. ನಡ್ಡಾ ಅವರ ಕೃತ್ಯ ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಇದಕ್ಕೆ ಪೂರಕವಾಗಿ ಅಂದಿನ ಕೆಲವು ಛಾಯಾ ಚಿತ್ರಗಳನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಈ ವಿಷಯವನ್ನು ಖಂಡಿಸಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದರು. ಇದೀಗ ಈ ಸಂಬಂಧ ದೂರು ದಾಖಲಾಗಿದೆ.

Leave a Reply