ಬೆಂಗಳೂರು: ರಾಜ್ಯದ ಎಲ್ಲಾ ಮಾಲ್ ಗಳು ವಾಣಿಜ್ಯ ಸಂಕೀರ್ಣ ಹಾಗೂ ಇತರೆ ಸಾರ್ವಜನಿಕ ಕಟ್ಟಡಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯದ ಕಾನೂನು ಅನುಮೋದನೆಗಾಗಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ರಾಜ್ಯದ ಎಲ್ಲಾ ವಾಣಿಜ್ಯ ಮಳಿಗೆ ಮತ್ತು ವ್ಯವಹಾರಿಕ ಕಟ್ಟಡಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತೀರ್ಮಾನಿಸಲಾಗಿತ್ತು.
ಅದರಂತೆ ಸುಗ್ರೀವಾಜ್ಞೆಗೆ ಅನುಮೋದನೆ ನೀಡಯವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಿಸಿದ ರಾಜ್ಯಪಾಲರು ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಸಲಹೆ ಮಾಡಿದ್ದರು. ಅದರಂತೆ ವಿಧೇಯಕವನ್ನುವಿಧಾನಸಭೆಯಲ್ಲಿಂದು ಮಂಡಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕ ಮಂಡಿಸಿದರು. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ಗಳು ಮೊದಲಾದ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ, ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.
ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿ ನೇಮಿಸಲು ಉಲ್ಲೇಖಿಸಲಾಗಿದೆ.



