ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರದ ಪ್ರತಿನಿಧಿಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ವಿವಾದ ಕುರಿತಂತೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಮತ್ತು ಅಕ್ಕಲಕೋಟೆ ಕರ್ನಾಟಕದ ಭಾಗವಾಗಬೇಕು ಎಂಬುದು ನಮ್ಮ ಆಗ್ರಹ ಎಂದು ಅವರು ಹೇಳಿದ್ದಾರೆ.
ದೇವೇಂದ್ರ ಫಡಣವೀಸ್ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿಗಳು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದಿಗೂ ನನಸಾಗುವುದಿಲ್ಲ. ರಾಜ್ಯದ ನೆಲ, ಜಲ, ಗಡಿ ರಕ್ಷಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯದ ಒಂದಿಂಚು ಜಾಗವನ್ನೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿನ ಕನ್ನಡ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬುದು ನಮ್ಮ ಆಗ್ರಹ. ಮಹಾರಾಷ್ಟ್ರ ಸರ್ಕಾರ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು 2004 ರಿಂದಲೂ ದಾವೆಗಳನ್ನು ಹೂಡುತ್ತಿದೆ. ಈವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.




