ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಮುಗಿದ ಅಧ್ಯಾಯ. ಹೀಗಿದ್ದರೂ ಪದೇ ಪದೇ ಕೆಣಕಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಸೌಹಾರ್ದಯುತ ವಾತಾವರಣ ಹಾಳುಗೆಡುವುದು ಅಲ್ಲಿನ ಸರ್ಕಾರದ ಉದ್ದೇಶವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿವಾದವನ್ನು ಮುಂದಿಟ್ಟುಕೊಂಡು ನೆರೆ ರಾಜ್ಯ ಬೆಂಕಿ ಹಚ್ಚುವ ಕೆಲಸ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಸರ್ಕಾರ ಯಾವಾಗಲೂ ಗಡಿ ವಿವಾದವನ್ನು ಕೆಣಕಿ ರಾಜಕೀಯ ಲಾಭ ಪಡೆದುಕೊಳ್ಳಲು ಹುನ್ನಾರ ನಡೆಸುತ್ತದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಏಕೀಕರಣ ಹೋರಾಟ ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರಿಗೆ ಪಿಂಚಣಿ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಯಾರೆಲ್ಲಾ ಹೋರಾಟ ಮಾಡಿದ್ದರೋ ಅವರೆಲ್ಲರಿಗೂ ಪಿಂಚಣಿ ನೀಡುತ್ತೇವೆ ಎಂದು ಘೋಷಣೆ ಮಾಡಿದರು.
ಈ ಹಿಂದೆ ಮಹಾರಾಷ್ಟ್ರದ ಜತ್ತ ತಾಲ್ಲೂಕು ತೀವ್ರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು, ಆಹಾರದ ಸಮಸ್ಯೆ ಎದುರಾಗಿತ್ತು. ನಾವು ಮಾನವೀಯತೆ ದೃಷ್ಟಿಯಿಂದ ಅಲ್ಲಿನ ಜನರಿಗೆ ನೀರು, ಆಹಾರ ಪೊಟ್ಟಣ, ಹಾಸಿಗೆ, ಹೊದಿಕೆಗಳನ್ನು ಕಳುಹಿಸಿಕೊಟ್ಟಿದ್ದೆವು. ಮಹಾರಾಷ್ಟ್ರದಲ್ಲಿದ್ದರೂ ಅಲ್ಲಿನ ಜನರೇ ಜತ್ತ ತಾಲ್ಲೂಕನ್ನು ಕರ್ನಾಟಕಕ್ಕೆ ಸೇರಿಸುವ ನಿರ್ಣಯವನ್ನೂ ಮಾಡಿದ್ದಾರೆ. ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಎರಡು ರಾಜ್ಯಗಳ ನಡುವೆ ಸೌಹಾರ್ದ ವಾತಾವರಣ ಇರುವಾಗ, ಎಲ್ಲಾ ಭಾಷಿಕರನ್ನು ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಇರುವ ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಅದನ್ನು ನಾವು ಮಾಡುತ್ತೇವೆ ಎಂದರು.
ಸುಪ್ರೀಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ. ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ ಎಂದರು.
ರಾಜ್ಯದ ಕಾನೂನು ತಂಡದಲ್ಲಿ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಶ್ಯಾಮ್ ದಿವಾನ್, ಉದಯ್ ಹೊಳ್ಳ, ಮಾರುತಿ ಜಿರ್ಲೆ ಇದ್ದಾರೆ. ಇವರ ಜೊತೆ ನಾಳೆ ಬೆಳಿಗ್ಗೆ ವಿಡಿಯೊ ಸಭೆ ಇದೆ ಎಂದರು.
‘ರಾಜ್ಯ ಪುನರ್‌ವಿಂಗಡಣಾ ಕಾಯ್ದೆ ಪ್ರಕಾರ ಮಹಾರಾಷ್ಟ್ರಕ್ಕೆ ಸುಪ್ರೀಂಕೋರ್ಟ್‌ನಲ್ಲಿ ಸೋಲಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ, ಬೀದರ್, ಬಾಲ್ಕಿ ಸೇರಿದಂತೆ ಕರ್ನಾಟಕ ಗಡಿಯಲ್ಲಿರುವ 865 ಹಳ್ಳಿಗಳು ತಮಗೆ ಸೇರಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ. 1956ರ ರಾಜ್ಯ ಪುನರ್ ವಿಂಗಡಣಾ ಕಾಯ್ದೆಯನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 2004ರಲ್ಲಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ನಡೆಯುತ್ತಿದ್ದು, ವಿದ್ಯಮಾನ ಕುತೂಹಲ ಮೂಡಿಸಿದೆ.




