ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿಮಾಡಿ, ಸಂವಿಧಾನದ 356ನೇ ಪರಿಚ್ಛೇದದಡಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಮನವಿ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸರ್ಕಾರಿ ಕಾಮಗಾರಿಗಳ ವೆಚ್ಚದಲ್ಲಿ 40% ಅನ್ನು ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹಾಗೂ ಸಂಘದ ಲಕ್ಷಕ್ಕೂ ಅಧಿಕ ಸದಸ್ಯರು ಪ್ರಧಾನಿಗಳಿಗೆ ಬರೆದ ಪತ್ರವೇ ಸಾಕ್ಷಿ ಎಂದಿದ್ದಾರೆ.
ರಾಜ್ಯ ಸರ್ಕಾರದ ಕಮಿಷನ್ ದಂಧೆ ಹಾಗೂ ಅಕ್ರಮ ಹಣದ ವರ್ಗಾವಣೆ ಬಗ್ಗೆ ಗುತ್ತಿದಾರರ ಸಂಘ ಪ್ರಧಾನಿಗಳಿಗೆ ಬರೆದ ಪತ್ರದ ಬಗ್ಗೆ ಪತ್ರಿಕೆಗಳು ವರದಿ ಮಾಡಿವೆ. ನಮ್ಮ ಸರ್ಕಾರವನ್ನು 10% ಸರ್ಕಾರ ಎಂದು ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇದಕ್ಕೇನು ಹೇಳ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ನಡೆಸಿರುವ ಎಸಿಬಿ ದಾಳಿಯಿಂದ ಅಲ್ಲಿನ ಭ್ರಷ್ಟಾಚಾರವೂ ಬಯಲಾಗಿದೆ. ಒಂದು ಅಂದಾಜಿನ ಪ್ರಕಾರ ಬಿಡಿಎ ಭ್ರಷ್ಟಾಚಾರದಿಂದ ಸರ್ಕಾರದ ಖಜಾನೆಗೆ ಸುಮಾರು ರೂ.300 ಕೋಟಿ ನಷ್ಟವಾಗಿದೆ. ಎಸಿಬಿ ಕಾರ್ಯದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡದೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.




