ಇ ಆಫೀಸ್ ಶೇ.100 ರಷ್ಟು ಬಳಕೆಗೆ ತಾಕೀತು!
ರಾಯಚೂರು: ಕಡ್ಡಾಯ ಇ-ಆಫೀಸ್ ಬಳಕೆಗೆ ಸೂಚಿಸಿ ಆರು ತಿಂಗಳಾಗಿದೆ. ಆದರೆ, ರಾಯಚೂರಿನ ಲಿಂಗಸಗೂರು, ಮಸ್ಕಿ ಹಾಗೂ ಸಿರವಾರ ತಾಲೂಕುಗಳಲ್ಲಿ ಈವರೆಗೆ ಇ-ಆಫೀಸ್ ಅನುಷ್ಠಾನವೇ ಆಗಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರಾಯಚೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಇ-ಆಫೀಸ್ ಮೂಲಕ ಕಡತ ವಿಲೇವಾರಿಗೆ ಮುಂದಾದರೆ, ಎಲ್ಲಾ ಕೆಲಸಗಳೂ ವೇಗ ಪಡೆಯುತ್ತವೆ. ಅಧಿಕಾರಿಗಳ-ಜನರ ಸಮಯವೂ ಉಳಿಯುತ್ತದೆ. ಹೀಗಾಗಿ ಶೀಘ್ರದಲ್ಲಿ ರಾಯಚೂರಿನಲ್ಲಿ ಇ-ಆಫೀಸ್ ಅನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು. ಫೆಬ್ರವರಿ ತಿಂಗಳಿನಿಂದ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಗಳಿಂದ ಭೌತಿಕ ಕಡತಗಳನ್ನು ಸ್ವೀಕರಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಸಚಿವ ಕೃಷ್ಣ ಬೈರೇಗೌಡ ಅವರು ರಾಯಚೂರು ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಜಿಲ್ಲಾಭವನ ಕಟ್ಟಡಕ್ಕೆ ಅಧಿಕಾರಿಗಳ ಜೊತೆ ಭೇಟಿ ನೀಡಿ ನಿರ್ಮಾಣ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು. ಮುಂದಿನ ನಾಲ್ಕು ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಸಬೇಕು ಎಂದು ಸೂಚನೆ ನೀಡಿದರು.
ತಕರಾರು ಅರ್ಜಿಗಳ ವಿಲೇಗೆ ಕಟ್ಟುನಿಟ್ಟಿನ ಸೂಚನೆ: ಜನವರಿ ತಿಂಗಳ ನಂತರ 90 ದಿನಗಳಿಗೆ ಮೀರಿದ ಯಾವ ತಕರಾರು ಪ್ರಕರಣಗಳೂ ಸಹ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಉಳಿಯುವಂತಿಲ್ಲ, ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಳೆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಕರಾರು ಪ್ರಕರಣಗಳ ಇತ್ಯರ್ಥ ವೇಗ ಪಡೆದುಕೊಂಡಿದೆ ಎಸಿ ಕೋರ್ಟ್ ಗಳಲ್ಲಿ ಐದು ವರ್ಷಕ್ಕೆ ಮೇಲ್ಪಟ್ಟ 59,800 ಪ್ರಕರಣಗಳು ಇದ್ದವು. ಆದರೆ, ಕಳೆದ ಮೂರೇ ತಿಂಗಳಲ್ಲಿ 33,000 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಕೋರ್ಟ್ ನಲ್ಲಿರುವ ಪ್ರಕರಣಗಳೂ ಸಹ ತ್ವರಿತ ಗತಿಯಲ್ಲಿ ಇತ್ಯರ್ಥವಾಗುತ್ತಿದೆ ಎಂದರು.
ತಕರಾರು ಪ್ರಕರಣಗಳ ಕಾರಣಕ್ಕೆ ಸಾರ್ವಜನಿಕರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿತ್ತು. ಆದರೆ, ಇದೀಗ ಅಧಿಕಾರಿಗಳು ಸೂಚನೆಯಂತೆ ತಕರಾರು ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ. ಮುಂದಿನ ದಿನಗಳಲ್ಲೂ ಸಹ ಅಧಿಕಾರಿಗಳು ಎಲ್ಲಾ ಜಿಲ್ಲೆಯಲ್ಲೂ ತ್ವರಿತಗತಿಯಲ್ಲಿ ಕಂದಾಯ ಇಲಾಖೆ ಪ್ರಕರಣಗಳನ್ನು ಮುಗಿಸಿ ಜನರಿಗೆ ತುಸು ನೆಮ್ಮದಿ ನೀಡಿ ಎಂದರು.
ಸಭೆಯಲ್ಲಿ ಶಾಸಕರಾದ ಮಾನಪ್ಪ ವಜ್ಜಲ್, ಬಸನಗೌಡ ದದ್ದಲ್ ಸಚಿವರಾದ ಭೋಸರಾಜು ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳೂ ಹಾಜರಿದ್ದರು.




