ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ಸಿಗೆ ಏಳು ಸ್ಥಾನ ಲಭಿಸಲಿದೆ. ಇದಕ್ಕೆ ಆಯ್ಕೆ ಬಯಸಿ ಹಲವು ನಾಯಕರು ಪ್ರಬಲ ಪೈಪೋಟಿ ನಡೆಸಿದ್ದು ತಡರಾತ್ರಿ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ನಿನ್ನೆ ತಡರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಚರ್ಚೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಮಾತ್ರ ಅಂತಿವಾಗಿದೆ.
ಮೂಲಗಳ ಪ್ರಕಾರ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಲಾ 2 ಸ್ಥಾನಗಳನ್ನು ಹಂಚಿಕೊಂಡಿದ್ದು, ಉಳಿದ 3 ಸ್ಥಾನಗಳಿಗೆ ಆಯ್ಕೆ ಮಾಡಲು ಹೈಕಮಾಂಡ್ ನಿರ್ದೇಶನ ಪಾಲಿಸುವ ಒಪ್ಪಂದವಾಗಿದೆ ಎನ್ನಲಾಗಿದೆ.
ಪಕ್ಷದ ನಾಯಕ ರಾಹುಲ್ಗಾಂಧಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದು, ಇಂದು ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮೇಲ್ನೋಟಕ್ಕೆ ಈ ಬಾರಿ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೂ ಅವಕಾಶ ನೀಡುವ ಸಾಧ್ಯತೆಗಳಿವೆ. ಕುಟುಂಬ ಹಾಗೂ ಪ್ರಭಾವಿಗಳ ಲಾಬಿ ಹೊರತಾಗಿ ಕಾರ್ಯಕರ್ತರನ್ನು ಕಡೆಗಣಿಸಲಾಗುವುದಿಲ್ಲ ಎಂಬ ಸಂದೇಶವನ್ನು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ ಎನ್ನಲಾಗಿದೆ.
ಉನ್ನತ ಮೂಲಗಳ ಪ್ರಕಾರ ಮರು ಆಯ್ಕೆ ಬಯಸಿರುವ ಸಣ್ಣ ನೀರಾವರಿ ಸಚಿವ ಬೋಸರಾಜು ಅವರಿಗೆ ಅವಕಾಶ ನಿರಾಕರಿಸುವ ಸಾಧ್ಯತೆ ದಟ್ಟವಾಗಿದ್ದು, ಇವರ ಬದಲಿಗೆ ರಾಯಚೂರಿನವರೇ ಆದ ಪಕ್ಷದ ಕಾರ್ಯಾಧ್ಯಕ್ಷ ಹಾಗೂ ಪರಿಶಿಷ್ಟ ಜಾತಿಗೆ ಸೇರಿದ ವಸಂತಕುಮಾರ್ ಅವರಿಗೆ ಅವಕಾಶ ಸಿಗಲಿದೆ ಎನ್ನಲಾಗುತ್ತಿದೆ.
ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್ಬಾಬು, ಪ್ರಧಾನ ಕಾರ್ಯದರ್ಶಿ ನಟರಾಜ್ ಗೌಡ, ಇಸ್ಮಾಯಿಲ್ ತಮಟಗಾರ, ಐ ವಾನ್ ಡಿಸೋಜಾ, ಕರಡಿ ಸಂಗಣ್ಣ ಸೇರಿದಂತೆ ಹಲವರ ಹೆಸರುಗಳು ಪ್ರಮುಖವಾಗಿ ಕೇಳಿಬಂದಿವೆ.



