ಬೆಂಗಳೂರು: ವಿಧಾನಸಭೆ ಚುನಾವಣೆಗೆ ರಾಜ್ಯದ ಜನತೆಗೆ ನೀಡಿದ ಭರವಸೆಯ ಐದೂ ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಯುವನಿಧಿ ಫಲಾನುಭವಿಗಳ ನೋಂದಣಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಯುವನಿಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. 5.29 ಲಕ್ಷ ಯುವಕ, ಯುವತಿಯರಿಗೆ ಪ್ರಸಕ್ತ ವರ್ಷ ನಿರುದ್ಯೋಗ ಭತ್ಯೆ ನೀಡಲಾಗುವುದು. ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.
ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಯಾವ ಆಧಾರದಲ್ಲಿ ಹೇಳಿದರು. ಅವರೇನು ಆರ್ಥಿಕ ತಜ್ಞರಾ? ಎಂದು ಪ್ರಶ್ನಿಸಿದರು.
ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದರೆ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಹೇಳಿದ್ದರು. ಅವರ ಮಾತು ಸುಳ್ಳಾಗಿದೆ. ಎಲ್ಲಾ ಗ್ಯಾರಂಟಿಗಳಿಗೂ ಬಜೆಟ್ನಲ್ಲಿ ಅನುದಾನ ಒದಗಿಸಿ ಅನುಷ್ಠಾನಕ್ಕೆ ತಂದಿದ್ದೇವೆ. ಮೋದಿ ಒಬ್ಬ ಸುಳ್ಳುಗಾರ ಪ್ರಧಾನಿ ಎಂಬುದು ಸಾಬೀತಾಗಿದೆ. ಹನ್ನೆರಡು ವರ್ಷ ಮುಖ್ಯಮಂತ್ರಿಯಾಗಿ, ಹತ್ತು ವರ್ಷ ಪ್ರಧಾನಿಯಾಗಿರುವ ವ್ಯಕ್ತಿ ಹೀಗೆಲ್ಲ ಮಾತನಾಡಬಹುದೆ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಂತೆ ಐದು ಗ್ಯಾರಂಟಿಗಳನ್ನೂ ಜಾರಿ ಮಾಡುತ್ತಿದ್ದೇವೆ. ಇದರಿಂದ ಸರ್ಕಾರ ದಿವಾಳಿಯಾಗಿಲ್ಲ. ಜನರಿಗೆ ಆರ್ಥಿಕ ಶಕ್ತಿ ಬಂದಿದೆ ಎಂದರು.




