ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ: ಬಿಜೆಪಿ

2 years ago

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿರುವ ಬಿಜೆಪಿ ಹಾವೇರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಒತ್ತಾಯ ಮಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ. ಸಿ.ಎನ್.ಅಶ್ವತ್ಥನಾರಾಯಣ್, ಶಾಸಕ ಎಸ್.ಆರ್.ವಿಶ್ವನಾಥ್ ಸೇರಿ ಹಲವು ನಾಯಕರು ರಾಜ್ಯ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಆರೋಪಿಸಿದರು.

ಹಾವೇರಿ ಗ್ಯಾಂಗ್ ರೇಪ್ ಪ್ರಕರಣದ ಕುರಿತು ಪರಿಶೀಲನೆ ನಡೆಸಲು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಸಮಿತಿ ಹಾವೇರಿಗೆ ಭೇಟಿ ಕೊಡಲಿದೆ. ಇವರ ವರದಿಯನ್ನಾಧರಿಸಿ ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಘೋಷಿಸಿದರು.

ಹಾವೇರಿ ಘಟನೆಗೆ ಸಂಬಂಧಿಸಿದಂತೆ ಕೇವಲ ಮೂವರ ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಅವರು, ಈ ಪ್ರಕರಣವನ್ನು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿ ವಿಶೇಷ ಪೊಲೀಸ್ ತಂಡ(ಎಸ್ಐಅಟಿ) ವಹಿಸಬೇಕು ಎಂದು ಆಗ್ರಹಿಸಿದರು.

ಆರೋಪಿಗಳು ಅಲ್ಪಸಂಖ್ಯಾತರು ಎಂಬ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಮೊದಲು ಪೊಲೀಸರು ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಪ್ರಕರಣಕ್ಕೆ ತಿಪ್ಪೆ ಸಾರಿಸುವ ಕೆಲಸ ಮಾಡಲು ಮುಂದಾಗಿದ್ದರು. ಆದರೆ, ಸ್ವತಃ ಯುವತಿಯೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದರಿಂದ ಪ್ರಕರಣ ದಾಖಲಿಸಿದ್ದಾರೆ ಎಂದರು.

ಈಗ ಸಂತ್ರಸ್ತೆ ಮಹಿಳೆಯೇ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವಿಡಿಯೋ ಕಾಲ್ ಮಾಡಿ ಹೇಳಿದ್ದಾರೆ. ಪ್ರಕರಣವನ್ನು ಸರಿಯಾಗಿ ನಿರ್ವಹಿಸದ ಪೊಲೀಸರನ್ನು ಅಮಾನತುಪಡಿಸಬೇಕು. ನಿಷ್ಪಾಕ್ಷಪಾತ ತನಿಖೆಯಾಗಬೇಕೆಂದರೆ ಎಸ್ಐರಟಿಗೆ ವಹಿಸುವುದು ಸೂಕ್ತ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂನಲ್ಲಿ ಯುವಕರು ಈ ಕೃತ್ಯವನ್ನು ಎಸಗಿದ್ದಾರೆ. ಕೆಲವು ವರ್ಗಗಳು ನಮ್ಮನ್ನು ಯಾರು ಮುಟ್ಟುವ ಧೈರ್ಯ ಮಾಡುವುದಿಲ್ಲ ಎಂಬ ಭ್ರಮೆಯಲ್ಲಿದ್ದಾರೆ. ಪೊಲೀಸರ ವೈಫಲ್ಯ ಇದರಲ್ಲಿ ಎದ್ದು ಕಾಣುತ್ತಿದೆ ಎಂದರು.

ಒಂದು ವೇಳೆ ಇದೇ ಕೃತ್ಯವನ್ನು ಬೇರೆ ಸಮುದಾಯದವರು ಮಾಡಿದ್ದರೆ ದೂರು ದಾಖಲಾಗುವ ಮುನ್ನವೇ ಅವರನ್ನು ಬಂಧಿಸಿ ಒಳಗೆ ಹಾಕುತ್ತಿದ್ದಿರಿ. ಅಲ್ಪಸಂಖ್ಯಾತ ಸಮುದಾಯದ ರಕ್ಷಕರು ಎಂದು ಹೇಳಿಕೊಳ್ಳುವ ಕಾಂಗ್ರೆಸ್ನಧವರು ಈಗ ಅದೇ ಸಮುದಾಯದ ಆರೋಪಿಗಳನ್ನು ರಕ್ಷಣೆ ಮಾಡಲು ಹೊರಟಿರುವುದು ದುರ್ದೈವವೇ ಸರಿ ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ಕೂಡ ರಕ್ಷಣೆ ಇಲ್ಲದಂತಾಗಿದೆ. ಪೊಲೀಸ್ ಠಾಣೆಗಳು ಕಲೆಕ್ಷನ್ ಅಡ್ಡಗಳಾಗಿವೆ. ಕೆಲವರು ದುಡ್ಡು ಕೊಟ್ಟು ಪೋಸ್ಟಿಂಗ್ ಮಾಡಿಕೊಂಡಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ತಿಂಗಳಿಗೆ ಇಂತಿಷ್ಟು ಕೊಡಬೇಕೆಂದು ಇನ್ಸ್ಪೆಕಕ್ಟರ್ ಸೇರಿದಂತೆ ಹಿರಿಯ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾದರೆ ಪೊಲೀಸರು ಕರ್ತವ್ಯ ನಿರ್ವಹಿಸುವುದು ಹೇಗೆ ಎಂದರು.

ಹಾನಗಲ್ ಅಷ್ಟೇ ಅಲ್ಲ ಕೋಲಾರದಲ್ಲೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕರ್ನಾಟಕ ಜಂಗಲ್ ರಾಜ್ಯವಾಗಿದೆ. ಒಂದು ವೇಳೆ ಸರ್ಕಾರ ಎಸ್ಐಯಟಿ ತನಿಖೆ ವಹಿಸದಿದ್ದರೆ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಸದ್ಯದಲ್ಲೇ ಸಂತ್ರಸ್ತ ಮಹಿಳೆಯನ್ನು ನಮ್ಮ ಪಕ್ಷದ ನಿಯೋಗ ಭೇಟಿ ಮಾಡಲಿದೆ ಎಂದರು.

ಈ ಪ್ರಕರಣವನ್ನು ಸರ್ಕಾರ ಮುಚ್ಚಿ ಹಾಕಲು ಮುಂದಾಗಿತ್ತು. ಯಾವಾಗ ಸಂತ್ರಸ್ತ ಮಹಿಳೆ ಮ್ಯಾಜಿಸ್ಟ್ರೇಟ್ ಮುಂದೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿಕೆ ದಾಖಲಿಸಿದರೋ ಕೊನೆಗೆ ವಿಧಿ ಇಲ್ಲದೆ ಆರೋಪಿಗಳನ್ನು ಬಂಧಿಸಿದ್ದಾರೆ. ಇದೇನಾ ನಿಮ್ಮ ಆಡಳಿತ ಎಂದರು.

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಕಾನೂನಿನ ಮೇಲೆ ನಂಬಿಕೆ ಇಲ್ಲ. ಡಿಜೆಹಳ್ಳಿ ಕೆಜೆಹಳ್ಳಿ ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ, ಡಿಸಿಎಂ ಅವರನ್ನು ಅಮಾಯಕರು ಎಂದು ಹೇಳುತ್ತಾರೆ. ಪೊಲೀಸರ ಕ್ರಮ ಸರಿ ಇದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಒಂದು ಕಡೆ ಓಲೈಕೆ ರಾಜಕಾರಣ ಮಾಡುತ್ತಾರೆ. ಜಾತ್ಯತೀತತೆ ಎಂದರೆ ಎಲ್ಲ ಧರ್ಮ, ಜಾತಿಯವರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದು. ಈ ಪ್ರಕರಣದಲ್ಲಿ ಎಸ್ ಐಟಿ ಮಾಡಿ ಪೊಲಿಸರಿಗೆ ಮುಕ್ತ ಅವಕಾಶ ಕೊಡಬೇಕು. ಆಗ ನ್ಯಾಯ ದೊರೆಯುತ್ತದೆ. ಸರ್ಕಾರ ಎಸ್ ಐಟಿ ರಚನೆ ಮಾಡದಿದ್ದರೆ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದರು.

Leave a Reply