ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹಾಡು ಹಗಲೇ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ವಿಧಾನಸಭೆಯಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದವು.
ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಹಾವೇರಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವಾಗಿದೆ. ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ ಎಂದರು.
ಶಿವಮೊಗ್ಗದಲ್ಲಿ ಮಚ್ಚು- ಲಾಂಗ್ಗಳ ಬ್ಯಾನರ್ ಹಾಕುತ್ತಿದ್ದಾರೆ. ಸೈಬರ್ ಕ್ರೈಮ್ಗಳು ಹೆಚ್ಚಾಗಿವೆ. ಈ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಕೋರಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಬೇಕು ಎಂದರು.
ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಕುರಿತು ಚರ್ಚೆಗೆ ಬೆಳಗಾವಿಯ ಅಧಿವೇಶನದಲ್ಲೂ ನಿಲುವಳಿ ಸೂಚನೆ ನೀಡಿದ್ದೆವು. ಅಲ್ಲಿ ಅವಕಾಶ ಸಿಗಲಿಲ್ಲ. ಇದರ ನಂತರ ಪರಿಸ್ಥಿತಿ ಸುಧಾರಿಸಿದೆ ಎಂದರೆ, ಈಗ ಮತ್ತಷ್ಟು ಉಲ್ಬಣಿಸಿದೆ. ಕಾನೂನು ಸುವ್ಯವಸ್ಥೆ ಪಾಲಿಸಬೇಕಾದ ಪೊಲೀಸರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ವಿರೋಧ ಪಕ್ಷಗಳ ಬೇಡಿಕೆಯಂತೆ ಚರ್ಚೆ ಮಾಡಲು ನಮ್ಮ ಅಭ್ಯಂತರ ಇಲ್ಲ. ಅವರ ಕಾಲದಲ್ಲಿ ಬೆಂಗಳೂರಿನಲ್ಲಿ ಹೇಗೆ ಕೊಲೆಗಳಾಗುತ್ತಿದ್ದವು ಎಂದು ನಾನು ಹೇಳುತ್ತೇನೆ. ಅವರು ಹೇಳಲಿ, ಆದರೆ ನಿಯಮಾವಳಿ ಪ್ರಕಾರ ಮೊದಲು ಪ್ರಶ್ನೋತ್ತರ ನಡೆಯಲಿ ಎಂದರು.
ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕರಾದ ಸುನೀಲ್ ಕುಮಾರ್, ಅರಗ ಜ್ಞಾನೇಂದ್ರ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಚರ್ಚೆಗೆ ಮೊದಲು ಅವಕಾಶ ನೀಡಿ ಎಂದು ಪಟ್ಟು ಹಿಡಿದರು. ಈ ವೇಳೆ ಆಡಳಿತ ಪಕ್ಷದ ಕೆಲವು ಶಾಸಕರು ಎದ್ದುನಿಂತು ಮಾತನಾಡಲಾರಂಭಿಸಿದರು. ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಆಗ ಸಭಾದ್ಯಕ್ಷ ಯು.ಟಿ.ಖಾದರ್ ಈ ಬಗ್ಗೆ ನಾಳೆ ಚರ್ಚೆಗೆ ಅವಕಾಶ ನೀಡುವುದಾಗಿ ತಿಳಿಸಿದರು.




