ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಆರ್ಥಿಕ ನೆರವು ನೀಡಬೇಕು ಮತ್ತು ರಾಜ್ಯದ ಪರಿಸ್ಥಿತಿ ವಿವರಿಸಲು ಸರ್ವಪಕ್ಷಗಳ ಬೇಟೆಗೆ ಅನುಮತಿ ನೀಡಬೇಕು ಎಂದು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಡಿಸಿಎಂ ಡಾ.ಜಿ.ಪರಮೇಶ್ವರ್. ಕೇಂದ್ರ ಸರ್ಕಾರ ತಮ್ಮ ಮನವಿಗೆ ಸ್ಪಂದಿಸದೆ ಹೋದರೆ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.
- ಪ್ರತ್ಯೇಕ ಮಹಿಳಾ ಮತ್ತು ಮಕ್ಕಳ ಸೈಬರ್ ರಕ್ಷಣೆ ದಳ ಸ್ಥಾಪನೆ
- ಮನವಿಗೆ ಸ್ಪಂದಿಸದಿದ್ದರೆ ಕಾನೂನು ಹೋರಾಟ: ಡಾ.ಜಿ.ಪರಮೇಶ್ವರ್
- ಜಿಲ್ಲಾ, ತಾಲೂಕು ಪಂಚಾಯಿತಿಗಳಿಗೆ ಜನವರಿಯಲ್ಲಿ ಚುನಾವಣೆ: ಈಶ್ವರ್ ಖಂಡ್ರೆ
- ‘ಸ್ಮೋಕಿಂಗ್ ಫ್ರೀ ಝೋನ್’ ಜಾರಿಗೆ ತರಲು ಪ್ರಸ್ತಾವನೆ ಸಿದ್ಧ
- ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಡಿ.ಕೆ.ಶಿವಕುಮಾರ್
ಬರಗಾಲದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಮತ್ತೊಮ್ಮೆ ಪತ್ರ ಮುಖೇನ ಪ್ರಧಾನಿ ಮೋದಿ ಅವರ ಗಮನ ಸೆಳೆದಿರುವ ಅವರು, ತಕ್ಷಣ ತುರ್ತು ಪರಿಹಾರ ಬಿಡುಗಡೆ ಮಾಡಬೇಕು ಹಾಗೂ ಸರ್ವಪಕ್ಷಗಳ ನಿಯೋಗದ ಭೇಟಿಗೆ ಅನುಮತಿ ನೀಡಬೇಕು ಎಂದು ಕೋರಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ರೈತರು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಅವಕಾಶ ನೀಡಬಾರದು. ಕೇಂದ್ರ ಸರ್ಕಾರ ಕೂಡಲೇ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಬೇಕು. ಇನ್ನೂ ಸ್ಪಂದನೆ ದೊರೆಯದಿದ್ದರೆ ಮುಂದಿನ ಕಾನೂನು ಹಾಗೂ ಆಡಳಿತಾತ್ಮಕ ಕ್ರಮಗಳ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಮೂರು ಬಾರಿ ಮನವಿ ಸಲ್ಲಿಸಿದ್ದರೂ, ಕಳೆದ ಎರಡು ತಿಂಗಳಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯಕ್ಕೆ ಬರ ಪರಿಹಾರವಾಗಿ ಒಟ್ಟು 22,000 ಕೋಟಿ ನೀಡುವಂತೆ ಮನವಿ ಮಾಡಲಾಗಿದೆ, ಇದಕ್ಕೆ ಯಾವುದೇ ಸ್ಪಂದನೆ ಸಿಕ್ಕಿಲ್ಲ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ತಂಡಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನೂ ಸಲ್ಲಿಸಿವೆ. ಆದರೂ ಪರಿಹಾರ ಬಿಡುಗಡೆಗೆ ಕೇಂದ್ರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಇನ್ನೂ ಸ್ವಲ್ಪ ಕಾಲ ಕಾಯಲಿದ್ದು, ಆನಂತರ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಮುಂದಿನ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ಬರ ಯಾರನ್ನೂ ಕೇಳಿ ಬರುವುದಿಲ್ಲ. ರೈತರು ಸಂಕಷ್ಟದಲ್ಲಿರುವಾಗ ರಾಜಕೀಯ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಬ್ಬರ ಮೇಲೊಬ್ಬರು ಆರೋಪ ಮಾಡುವುದಕ್ಕಿಂತ ರೈತರ ನೆರವಿಗೆ ನಿಲ್ಲುವುದು ಮುಖ್ಯ. ಬರದ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ ಎಂಬುದನ್ನು ರೈತರು ಪ್ರಶ್ನಿಸುತ್ತಾರೆ. ರಾಜಕೀಯ ಮಾಡಲು ಬೇರೆ ವಿಚಾರಗಳಿವೆ. ರೈತರ ಸಂಕಷ್ಟದ ಸಂದರ್ಭದಲ್ಲಿ ರಾಜಕೀಯ ಮಾಡಬಾರದು ಎಂದರು.
ಕೇಂದ್ರ ಗೃಹ ಸಚಿವರು, ಕೃಷಿ ಸಚಿವರು ಹಾಗೂ ಪ್ರಧಾನಮಂತ್ರಿಗಳಿಗೆ ಈಗಾಗಲೇ ಪತ್ರ ಬರೆಯಲಾಗಿದೆ. ಕೇಂದ್ರ ಸಚಿವರನ್ನು ಭೇಟಿಯಾಗಲು ಸಮಯ ಕೋರಿ ಪತ್ರ ಬರೆಯುವುದು ಸಾಮಾನ್ಯ ಪ್ರಕ್ರಿಯೆ. ರಾಜ್ಯದ ಸಮಸ್ಯೆಗಳನ್ನು ನೇರವಾಗಿ ವಿವರಿಸಲು ಅವಕಾಶ ನೀಡಬೇಕು. ಜವಾಬ್ದಾರಿಯುತ ರಾಜ್ಯ ಸರ್ಕಾರವೊಂದು ಕೇಂದ್ರದ ಸಂಬಂಧಪಟ್ಟ ಸಚಿವಾಲಯಕ್ಕೆ ಪತ್ರ ಬರೆದಾಗ ಅದಕ್ಕೆ ಸೂಕ್ತವಾಗಿ ಸ್ಪಂದಿಸುವ ಜವಾಬ್ದಾರಿ ಕೇಂದ್ರ ಸರ್ಕಾರಕ್ಕಿದೆ ಎಂದರು.
ರಾಜ್ಯ ಸರ್ಕಾರ ಅರ್ಹ ರೈತರಿಗೆ ತಲಾ 5 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದು, ಈಗಾಗಲೇ ವಿತರಣೆ ಆರಂಭಿಸಿದೆ. ಬಹುತೇಕ ಎಲ್ಲ ಜಿಲ್ಲೆಗಳಿಗೂ ಪರಿಹಾರ ತಲುಪಿಸುವ ಕಾರ್ಯ ನಡೆಯುತ್ತಿದೆ. ಅಧಿವೇಶನ ಆರಂಭವಾಗುವ ಮುನ್ನವೇ ರೈತರಿಗೆ ಘೋಷಿಸಿರುವ ಹಣ ತಲುಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಸಂಬಂಧ ಈಗಾಗಲೇ ಸಭೆ ನಡೆಸಿ ಸೂಚನೆಗಳನ್ನು ನೀಡಲಾಗಿದೆ ಎಂದರು.




