ಇಡಿ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು: ಎಚ್.ಕೆ.ಪಾಟೀಲ್

2 years ago

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವುದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಮನಿ ಲ್ಯಾಂಡ್ರಿಂಗ್ ಎಲ್ಲಿದೆ? ಕಾನೂನನ್ನು ಮನಸ್ಸಿಗೆ ಬಂದಂತೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ರಾಜಭವನವನ್ನು ದುರುಪಯೋಗಪಡಿಸಿಕೊಂಡಿದ್ದರು. ಈಗ ಇಡಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ರಾಜಕೀಯ ಹತಾಶೆಯಿಂದ ತೀವ್ರ ಅಸಹನೀಯ ಸ್ಥಿತಿಗೆ ಇಳಿದಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಇಂತಹ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಅದನ್ನೇ ಬಳಸಿಕೊಳ್ಳುತ್ತೇವೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಪಂಚಖಾತ್ರಿ ಸೇರಿದಂತೆ ಹಲವಾರು ಯೋಜನೆಗಳು ಜನಮನ್ನಣೆ ಗಳಿಸಿವೆ. ಬಿಜೆಪಿಯವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ.ರಾಜಕೀಯ ದ್ವೇಷಕ್ಕಾಗಿ ಬಡವರ ಪರ ಕಾರ್ಯಕ್ರಮಗಳನ್ನು ದಿಕ್ಕು ತಪ್ಪಿಸಲು ಹೇಗೆಲ್ಲಾ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ ಎಂದರು.

ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಬಿಜೆಪಿ, ಜೆಡಿಎಸ್ ಪಕ್ಷಗಳು ಜೊತೆಯಾಗಿ ಸೇರಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿವೆ ಎಂದರು.

ಸಿದ್ದರಾಮಯ್ಯನವರ ಕಡೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ. 136 ಶಾಸಕರ ಜೊತೆ ಕಾಂಗ್ರೆಸ್ ಹೈಕಮಾಂಡ್ ಕೂಡ ಬೆಂಬಲ ವ್ಯಕ್ತಪಡಿಸುವುದಾಗಿ ಸ್ಪಷ್ಟಪಡಿಸಿದೆ. ಮುಂದೆಯೂ ಇದು ಮುಂದುವರೆಯಲಿದೆ ಎಂದರು.

ನಿವೇಶನ ವಾಪಸ್ ನೀಡಿದ ಬಳಿಕ ಪ್ರಕರಣ ಕಾನೂನಾತ್ಮಕವಾಗಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ನಾವು ಕಾದುನೋಡುತ್ತಿದ್ದೇವೆ. ತನಿಖೆಗೆ ಯಾವುದೇ ವಿರೋಧ ಇಲ್ಲ ಎಂದು ಸಿದ್ದರಾಮಯ್ಯನವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ವಿರೋಧಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಿವೆ ಎಂದರು.

Leave a Reply