ಕಾವೇರಿ ಬಿಕ್ಕಟ್ಟು ಪರಿಹಾರಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿ: ಎಚ್.ಡಿ.ದೇವೇಗೌಡ

3 years ago

#centralgovernment #intervene #solve #Cauverycrisis #HDDeveGowda

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಬಿಕ್ಕಟ್ಟು ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹಿಸಿದ್ದಾರೆ.

ಬಿಕ್ಕಟ್ಟು ಪರಿಹಾರಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿನ ವಾಸ್ತವಾಂಶ ಗಳನ್ನು ಅರಿಯಲು ತಜ್ಞರ ಸಮಿತಿ ಕಳುಹಿಸುವ ಬಗ್ಗೆ ಕೇಂದ್ರ ಜಲಶಕ್ತಿ ಇಲಾಖೆಯಿಂದ ಸುಪ್ರಿಂಕೋರ್ಟ್ಗೆ ಅರ್ಜಿ ಸಲ್ಲಿಸಿ ಮನವಿ ಮಾಡಬೇಕೆಂದು ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಐದು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದರು.

ಕೆಆರ್ಎಸ್ ಜಲಾಶಯದಲ್ಲಿ ನೀರಿಲ್ಲದಿರುವ ಫೋಟೋವನ್ನು ಪ್ರದ ರ್ಶಿಸಿ ಭಾವುಕರಾಗಿ ಮಾತನಾಡಿದ ಅವರು, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಮುಂದಿನ ಬೇಸಿಗೆಯವರೆಗೆ ಕುಡಿಯುವ ನೀರು ಮತ್ತು ಬೆಳೆಗಳಿಗೆ ಅಗತ್ಯವಿರುವ ನೀರಿನ ಪ್ರಮಾಣವನ್ನು ಆಧರಿಸಿ ಸಂಕಷ್ಟ ಸೂತ್ರ ರೂಪಿಸಬೇಕು. ಇದಕ್ಕಾಗಿ ತಮಿಳುನಾಡು ಮತ್ತು ಕರ್ನಾಟಕ ರಾಜ್ಯವನ್ನು ಹೊರತುಪಡಿಸಿದ ಐವರು ಪರಿಣಿತರ ತಂಡವನ್ನು ಉಭಯ ರಾಜ್ಯಗಳಿಗೆ ಕಳುಹಿಸಿ ವಾಸ್ತವಾಂಶದ ವರದಿ ಪಡೆದು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು. ಈಗ ಆಗಿರುವಂತೆ ಮುಂದೆ ತೊಂದರೆ ಉಂಟಾಗದಂತೆ ಪರಿಹಾರ ರೂಪಿಸಬೇಕು ಎಂದು ಹೇಳಿದರು.

ಪ್ರತಿ 15 ದಿನಗಳಿಗೊಮ್ಮೆ ನಿರ್ವಹಣಾ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕಾವೇರಿ ಜಲಾನಯನ ಭಾಗದ ಜಲಾಶಯಗಳಿಗೆ ಭೇಟಿ ನೀಡಿ ವಾಸ್ತವ ಸಂಗತಿಗಳನ್ನು ಆಧರಿಸಿ ನಿರ್ಣಯ ಕೈಗೊಳ್ಳಬೇಕು. ಜಲಶಕ್ತಿ ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದರು.

ಕಳೆದ 60 ವರ್ಷದಲ್ಲಿ ಕಾಂಗ್ರೆಸ್, ಬಿಜೆಪಿ ಪಕ್ಷಗಳ ನಿಲುವನ್ನು ನೋಡಿದ್ದೇನೆ. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನು ಬಳಸಿಕೊಂಡಿಲ್ಲ. ಎರಡೂ ರಾಜಕೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ನಾಡಿನ ಸಂಕಷ್ಟ ಪರಿಹಾರಕ್ಕಾಗಿ ಹೋರಾಟ ಮಾಡಿದ್ದೇನೆ. ತಮಿಳುನಾಡಿನ 40 ಸಂಸದರು ಒಗ್ಗಟ್ಟಾಗಿ ಹೋರಾಟ ಮಾಡುತ್ತಾರೆ. ನಮ್ಮಲ್ಲಿ 28 ಸಂಸದರು ಇದ್ದರೂ ಮೂಲೆಗುಂಪುಗಳಾಗುತ್ತಾರೆ. ಒಗ್ಗಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Leave a Reply