ಪ್ರಜ್ವಲ್ ರೇವಣ್ಣಗೆ ಜೀವಾವಧಿಯೋ, ಹತ್ತು ವರ್ಷ ಸೆರೆವಾಸವೋ?

10 months ago

ಬೆಂಗಳೂರು: ಜೆಡಿಎಸ್ ನಾಯಕ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ರ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. 

ಮಾಜಿ ಸಚಿವ ರೇವಣ್ಣ ಅವರ ನಿವಾಸದಲ್ಲಿ ಮನೆ ಕೆಲಸ ಮಾಡುತ್ತಿದ್ದ 47 ವರ್ಷದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದರು. ಇವರ ವಿರುದ್ಧ ಮೈಸೂರಿನ ಕೆ ಆರ್‌ ನಗರದ ಸಂತ್ರಸ್ತ ಮಹಿಳೆ ದೂರು ನೀಡಿದ್ದರು. ಈ ಸಂಬಂಧ 2024ರ ಏಪ್ರಿಲ್‌ 28ರಂದು ಹೊಳೆನರಸೀಪುರ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. 

ಅವರು ನೀಡಿದ ದೂರಿನ ಮೇರೆಗೆ ಸೈಬರ್‌ ಅಪರಾಧ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳಾದ 376(2)(ಎನ್‌), 376(2)(ಕೆ), 506, 354-ಎ, 354(ಎ), 354(ಬಿ), 354(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ 66ಇ ಅಡಿ ಪ್ರಕರಣ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಈ ತಂಡದ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2,000 ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. 2024ರ ಅಂತ್ಯದಲ್ಲಿ ಈ ಚಾರ್ಜ್‌ಶೀಟ್‌ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2000 ಪುಟಗಳ ಆರೋಪ ಪಟ್ಟಿ ಮತ್ತು 122 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿ ತೀರ್ಪು ಕಾಯ್ದಿರಿಸಿತ್ತು. ಅದರಂತೆ ತೀರ್ಪು ಪ್ರಕಟಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ, ಗಜಾನನ ಭಟ್ ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಸಾಬೀತಾಗಿದೆ ಎಂದರು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮೊದಲ ಬಾರಿಗೆ ಅತ್ಯಾಚಾರ ಎಸಗಲಾಗಿತ್ತು. ಆನಂತರ ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ನಿವಾಸದಲ್ಲಿ ಮತ್ತೊಮ್ಮೆ ಅತ್ಯಾಚಾರ ಎಸಗಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಪ್ರಕರಣದಲ್ಲಿ 34 ವರ್ಷದ ಪ್ರಜ್ವಲ್‌ ರೇವಣ್ಣ ಪಾತ್ರ ಸಾಬೀತಾಗಿದ್ದು, ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆದರು. ಅಲ್ಲದೇ‌ ಈ ಕುರಿತಂತೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಗಜಾನನ ಭಟ್ ಹೇಳಿದರು. 

ನ್ಯಾಯಾಧೀಶರು ತಮ್ಮ ತೀರ್ಪು ಪ್ರಕಟಿಸುತ್ತಿದ್ದಂತೆ ಕೋರ್ಟಿನಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದರು. ಈ ವೇಳೆ ಸರಕಾರಿ ಪರ ವಕೀಲರಾದ ಬಿ ಎನ್‌ ಜಗದೀಶ್‌, ಅಶೋಕ್‌ ನಾಯಕ್‌ ಮತ್ತು ಪ್ರಜ್ವಲ್‌ ರೇವಣ್ಣ ಪರ ವಕೀಲರಾದ ಅರುಣ್‌ ಹಾಗೂ ವಿಪುಲ್‌ ಜೈನ್‌ ಹಾಜರಿದ್ದರು.

ಒಟ್ಟು ಮೂರು ಪ್ರಕರಣ: ಈ ಪ್ರಕರಣ ಮಾತ್ರವಲ್ಲದೆ, ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಇವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

ಹೊಳೆ ನರಸೀಪುರ ಪ್ರಕರಣಕ್ಕೆ ಸಂಬಂಧಿಸಿದಂತೆ 2024ರ ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಕಳೆದ 14 ತಿಂಗಳಿನಿಂದ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದಾರೆ. ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿದೆ. ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆಯಿದೆ.

Leave a Reply