ಮಾಡಾಳ್ ವಿರುಪಾಕ್ಷಪ್ಪ ಲಂಚ ಪ್ರಕರಣ: ಅಮಿತ್ ಶಾ ಕಾರ್ಯಕ್ರಮ ರದ್ದು

3 years ago

ಬೆಂಗಳೂರು: ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವುದು ಬಿಜೆಪಿಯನ್ನು ಮುಜುಗರಕ್ಕೀಡು ಮಾಡಿದೆ.

ಈ ಪ್ರಕರಣದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೂಡ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ಅಮಿತ್ ಶಾ ಅವರ ಕರ್ನಾಟಕ ಭೇಟಿಯ ಕಾರ್ಯಕ್ರಮವನ್ನು ಮುಂದೂಡಿದೆ.

ಅಮಿತ್ ಶಾ ಇದೇ ತಿಂಗಳ 12ರಂದು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ.ರೇಣುಕಾಚಾರ್ಯ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಅಮಿತ್ ಷಾ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲಾಗಿತ್ತು.

ಸುಮಾರು ಒಂದು ಲಕ್ಷ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ತಯಾರಿ ನಡೆಸಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಪ್ರಮುಖರಿಗೆ ಆಹ್ವಾನವನ್ನೂ ಸಹ ನೀಡಲಾಗಿತ್ತು. ಆದರೆ ಮಾಡಾಳ್ ಪ್ರಕರಣ ಇದಕ್ಕೆ ಅಡ್ಢಿಯಾಗಿದೆ.

ಹೊನ್ನಾಳಿಯು ಚನ್ನಗಿರಿ ಕ್ಷೇತ್ರಕ್ಕೆ ಹೊಂದಿಕೊಂಡಿರುವುದರಿಂದ ಮಾಡಾಳ್ ಪ್ರಕರಣ ಸಹಜವಾಗಿ ಅಮಿತ್ ಷಾ ಅವರಿಗೆ ಮುಜುಗರವಾಗಲಿದೆ. ಹೀಗಾಗಿ ಲೆಕ್ಕಾಚಾರ ಹಾಕಿ ಹೊನ್ನಾಳಿಯ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಅಮಿತ್ ಶಾ ಅವರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಂಡಗಳು, ಕುರುಬರಹಟ್ಟಿ, ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ 12 ಜಿಲ್ಲೆಗಳ ಸುಮಾರು 53 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಬೇಕಿತ್ತು.

ಕೇಂದ್ರ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಶಾಸಕ ರೇಣುಕಾಚಾರ್ಯ ಸೇರಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳು ಸಮಾರಂಭದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಇದೀಗ ಮಾಡಾಳ ವಿರುಪಾಕ್ಷಪ್ಪ ಪ್ರಕರಣದಿಂದ ಏಕಾಏಕಿ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

Leave a Reply