ಬೆಂಗಳೂರು: ಸರ್ವೋಚ್ಛ ನ್ಯಾಯಾಲಯ ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿದ್ದಾರೆ.
ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇರುವ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಚಿತ ಲೋಕ್ ಅದಾಲತ್ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಅಲ್ಲದೇ, ಈ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು 3 ದಿನಗಳ ಒಳಗಾಗಿ ನೇರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಿ, ಅದರ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಕಳುಹಿಸಿಕೊಡಬೇಕು ಎಂದು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಕಂದಾಯ ಇಲಾಖೆ, ಕೆ.ಜಿ.ಐ.ಡಿ, ವಿಮಾ ಕಂಪನಿಗಳು, ಪೊಲೀಸ್ ಇಲಾಖೆ, ಖಾಸಗಿ ಕಾರ್ಪೊರೇಷನ್ ಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಈ ಎಲ್ಲಾ ಇಲಾಖೆಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಲಾಖಾ ಮುಖ್ಯಸ್ಥರು ಈ ವಿಷಯದಲ್ಲಿ ವೈಯಕ್ತಿಕ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.




