ಬೆಂಗಳೂರು: ಲೋಕಸಭೆ ಚುನಾವಣೆಯ ಪ್ರಚಾರದ ಕಾವು ತೀವ್ರಗೊಂಡಿರುವ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಯಾಣಿಸುತ್ತಿದ್ದ ಕಾರಿನ ಬಾಗಿಲು ಬಡಿದು ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ಸಮೀಪದಲ್ಲಿ ನಡೆದಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕೆ.ಆರ್.ಪುರದ ಗಣಪತಿ ದೇವಸ್ಥಾನ ಬಳಿ ಸೋಮವಾರ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಶೋಭಾ ಕರಂದ್ಲಾಜೆ ಅವರಿಗೆ ಸೇರಿದ್ದ ಕಾರಿನ ಬಾಗಿಲು ದ್ವಿಚಕ್ರ ವಾಹನಕ್ಕೆ ತಾಗಿ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ಪ್ರಕಾಶ್ (60) ಎಂಬುವವರು ಮೃತಪಟ್ಟಿದ್ದಾರೆ.
ಅಪಘಾತ ಸಂಬಂಧ ಕೆ.ಆರ್.ಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಲೋಕಸಭಾ ಚುನಾವಣೆ ಪ್ರಚಾರ ರ್ಯಾಲಿಗೆಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸೋಮವಾರ ಕೆ.ಆರ್.ಪುರಕ್ಕೆ ಬಂದಿದ್ದರು. ಅವರಿಗೆ ಸೇರಿದ್ದ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಇದೇ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಹೊರಟಿದ್ದರು.
ಕಾರಿನ ಚಾಲಕ ದಿಢೀರ್ ಬಾಗಿಲು ತೆರೆದಿದ್ದ. ವೇಗವಾಗಿ ಹೊರಟಿದ್ದ ಪ್ರಕಾಶ್ ಅವರ ದ್ವಿಚಕ್ರ ವಾಹನ, ಕಾರಿನ ಬಾಗಿಲಿಗೆ ಗುದ್ದಿತ್ತು. ಇದರಿಂದಾಗಿ ದ್ವಿಚಕ್ರ ವಾಹನ ಸಮೇತ ಪ್ರಕಾಶ್, ರಸ್ತೆಗೆ ಬಿದ್ದಿದ್ದರು. ಇದೇ ಮಾರ್ಗದಲ್ಲಿ ಅತೀ ವೇಗವಾಗಿ ಹೊರಟಿದ್ದ ಖಾಸಗಿ ಬಸ್ಸಿನ ಚಕ್ರ, ಪ್ರಕಾಶ್ ಅವರ ಮೇಲೆ ಹರಿದಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಪ್ರಕಾಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿಯೇ ಪ್ರಕಾಶ್ ಮೃತಪಟ್ಟಿದ್ದಾರೆ. ಶೋಭಾ ಕರಂದ್ಲಾಜೆ ಅವರ ಕಾರಿನ ಬಾಗಿಲು ದಿಢೀರ್ ತೆರೆದಿದ್ದರಿಂದಲೇ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ. ಕಾರಿನಲ್ಲಿ ಯಾರೆಲ್ಲ ಇದ್ದರು ಎಂಬುದನ್ನು ತಿಳಿದುಕೊಂಡು ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.




