ಅನುದಾನ ಬಿಡುಗಡೆ ವಿಚಾರದಲ್ಲಿ ಕೇಂದ್ರ ನಿಯಮಾನುಸಾರ ನಡೆದುಕೊಳ್ಳುತ್ತಿದೆ: ವಿಜಯೇಂದ್ರ

2 years ago

ಬೆಂಗಳೂರು: ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳುವ ಮೂಲಕ ಸಂತ್ರಸ್ತರ ಕಣ್ಣು ಒರೆಸಬೇಕಾದ ರಾಜ್ಯ ಸರ್ಕಾರ ರಾಜಕೀಯ ಕಾರಣಕ್ಕಾಗಿ ದೆಹಲಿಯಲ್ಲಿ ಪ್ರತಿಭಟನೆ ಮಾಡುವ ನಾಟಕ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿಧಾನಸೌಧಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿತು.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದನ್ನು ವಿರೋಧಿಸಿ ಬಿಜೆಪಿಯ ಎಲ್ಲ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಅನುದಾನ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ನಿಯಮ ಅನುಸಾರ ನಡೆದುಕೊಳ್ಳುತ್ತಿದೆ. ಆದರೆ ರಾಜ್ಯ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಮಾಡುವ ಮೂಲಕ ಒಕ್ಕೂಟ ವ್ಯವಸ್ಥೆಗೆ ವಿರೋಧಿ ನಿಲುವು ತಳೆದಿದೆ ಎಂದರು.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ, ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಾಚಿಕೆಯಾಗಬೇಕು ಇವರಿಗೆ ಎಂದರು.

ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸದ ದುಷ್ಟ ಸರ್ಕಾರ ಇದು. ಸರಿಯಾಗಿ ಅಧಿಕಾರ ನಡೆಸಲಾಗದೆ ಎಲ್ಲದ್ದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.

ಕೃಷ್ಣ ಮೇಲ್ದಂಡೆ ಯೋಜನೆಗೆ ಒಂದು ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಕೊಟ್ಟಿಲ್ಲ. ಮೇಕೆದಾಟು ಹೋರಾಟ ಸಹ ಒಂದು ನಾಟಕ. ಮಹದಾಯಿ ಯೋಜನೆಗೆ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ 7800 ಕೋಟಿ ರೂ. ಹಣ ನೀಡಿದ್ದರು. ಈ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಇದನ್ನು ಕಾಂಗ್ರೆಸ್ ಸರ್ಕಾರ ತಡೆದಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಸೋಲಿಸಿ, ಮನೆಗೆ ಚಲೋ ಮಾಡಿಸುತ್ತೇವೆ ಎಂದರು.

Leave a Reply