ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷ ಶಾಸಕ ರಾಜು ಕಾಗೆ ಸ್ಥಾನ ಅಬಾಧಿತ

7 months ago

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲದಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರಿಗೆ ಹೈಕಮಾಂಡ್ ಶಾಕ್ ನೀಡಿದ ವಿಚಾರ ಇದೀಗ ಪರಿಹಾರವಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಮಾತನಾಡುವ ವ್ಯಕ್ತಿಗಳನ್ನು ಹೈಕಮಾಂಡ್ ಸಹಿಸುವುದಿಲ್ಲ. ಈಗಾಗಲೇ ರಾಜಣ್ಣ ಅವರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸಲಾಗಿದೆ. ಇದೀಗ ವಾಯುವ್ಯ ರಸ್ತೆ ಸಾರಿಗೆ ನೀಗಮದ ಅಧ್ಯಕ್ಷ ರಾಜು ಕಾಗೆಯನ್ನು ಬದಲಾವಣೆ ಮಾಡಲಾಗಿದೆ ಎಂಬ ಸುದ್ದಿ ಹರಿದಾಡಿತ್ತು. 

ಇವರಿಂದ ತೆರವಾದ ಹುದ್ದೆಗೆ ಅರುಣ್ ಪಾಟೀಲ್ ನೇಮಕಕ್ಕೆ ಹೈಕಮಾಂಡ್ ನಿರ್ಧರಿಸಿದೆ ಎಂದು ಹೇಳಲಾಗಿತ್ತು. ಅದಕ್ಕೆ ಪೂರಕವಾಗಿ 39 ಜನರ ನಿಗಮ ಮಂಡಳಿ ನೇಮಕಾತಿ ಪ್ರಕಟಣೆ ಕಾಂಗ್ರೆಸ್ ನಾಯಕ ವೇಣುಗೋಪಾಲ್ ಅವರ ಸಹಿಯೊಂದಿಗೆ ಹೊರಬಿದ್ದಿತ್ತು.

ಈ ಬೆಳವಣಿಗೆಗಳ ಬೆನ್ನಲ್ಲೇ ಬೆಂಗಳೂರಿಗೆ ದೌಡಾಯಿಸಿದ ಶಾಸಕ ರಾಜು ಕಾಗೆ, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. 

ಈ ಸಮಯದಲ್ಲಿ ತಮ್ಮನ್ನು ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಿರುವ ಕುರಿತಂತೆ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಈ ವೇಳೆ ಸಿದ್ದರಾಮಯ್ಯ ಅವರು ತಾವು ಈಗಲೂ ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದೀರಿ. ಸರ್ಕಾರ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸಹಿಯೊಂದಿಗೆ ನೀಡಿರುವ ಪಟ್ಟಿಯಲ್ಲಿ ಮುದ್ರಣ ದೋಷವಿರಬಹುದು. ಆದರೆ ಸರ್ಕಾರದ ಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ರಾಜು ಕಾಗೆ ಅವರನ್ನು ಸಿದ್ದರಾಮಯ್ಯ ಸಮಾಧಾನಪಡಿಸಿದರು.

ಭೇಟಿ ನಂತರದಲ್ಲಿ ಮುಖ್ಯಮಂತ್ರಿ ಸಚಿವಾಲಯದಿಂದ ಅಧಿಕೃತ ಸ್ಪಷ್ಟನೆ ಹೊರ ಬಿದ್ದಿದೆ. ವಾಯುವ್ಯ ಸಾರಿಗೆ ನಿಗಮದ ಅಧ್ಯಕ್ಷರಾಗಿ ಶಾಸಕ ರಾಜು ಕಾಗೆ ಅವರು ಮುಂದುವರೆದಿದ್ದಾರೆ‌. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ. 

Leave a Reply