ಮೋದಿ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮ ಆರಂಭಿಸಿಲ್ಲ: ಸಿದ್ದರಾಮಯ್ಯ

2 years ago

ಬೆಂಗಳೂರು: ವಿಕಸಿತ ಭಾರತ ಮಾಡುವುದಾಗಿ ಹೇಳುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಒಂದೇ ಒಂದು ಸಾರ್ವಜನಿಕ ಉದ್ಯಮವನ್ನೂ ಆರಂಭಿಸಿಲ್ಲ. ಇರುವ ಸರ್ಕಾರಿ ಆಸ್ತಿಗಳನ್ನೇ ಮಾರಾಟ ಮಾಡಿದರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಅವರು ಈಗ ತಮ್ಮನ್ನು ತಾವು ದೇವರು ಕಳುಹಿಸಿದ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಮೋದಿಯೇನು ದೇವರ ಅವತಾರವೇ? ಎಂದರು.

ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ. ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದರು.

ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಅನಕ್ಷರತೆ, ಬಡತನ, ನಿರುದ್ಯೋಗ ವ್ಯಾಪಕವಾಗಿತ್ತು. ಆರ್ಥಿಕ ಚೈತನ್ಯ ಇರಲಿಲ್ಲ. ದೇಶದ ಐದೂವರೆ ಲಕ್ಷ ಹಳ್ಳಿಗಳು ಸಂಕಷ್ಟದಲ್ಲಿದ್ದವು. ಈ ಎಲ್ಲದಕ್ಕೂ ಪರಿಹಾರವಾಗಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತಲು ಜೀವನದುದ್ದಕ್ಕೂ ಶ್ರಮಿಸಿದರು ಎಂದರು.

ದೇಶವನ್ನು ವೈಜ್ಞಾನಿಕ, ಆಧುನಿಕತೆ ಆಧಾರದಲ್ಲಿ ನಿರ್ಮಿಸುತ್ತಾ ಭಾರತೀಯರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ನಿರಂತರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು. ಮೋದಿಯವರು ಯೋಜನಾ ಆಯೋಗವನ್ನು ಬದಲಾವಣೆ ಮಾಡಿ ನೀತಿ ಆಯೋಗ ಮಾಡಿದ್ದಾರೆ. ಇದರಲ್ಲಿ ಏನೂ ಇಲ್ಲ. ಹಿಂದೆ ಯೋಜನಾ ಆಯೋಗವಿದ್ದಾಗ ರಾಜ್ಯದ ಬಜೆಟ್ನ ಗಾತ್ರ, ಸಂಪನ್ಮೂಲ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿ ಅಂಗೀಕಾರ ನೀಡುತ್ತಿತ್ತು, ಬಳಿಕ ಅನುಷ್ಠಾನಗೊಳ್ಳುತ್ತಿತ್ತು ಎಂದರು.

ಭಾರತವನ್ನು ಇಡೀ ವಿಶ್ವದಲ್ಲಿ ಅತಿದೊಡ್ಡ ಮತ್ತು ಸದೃಢ ಪ್ರಜಾಪ್ರಭುತ್ವ ದೇಶವನ್ನಾಗಿ ರೂಪಿಸಿದ್ದು ನೆಹರೂ. ದೇಶದಲ್ಲಿರುವ ಬಹುತೇಕ ಅಣೆಕಟ್ಟು, ಶಿಕ್ಷಣ ಸಂಸ್ಥೆಗಳು, ಸಾರ್ವಜನಿಕ ಉದ್ಯಮಗಳು ನಿರ್ಮಾಣಗೊಂಡಿದ್ದು, ನೆಹರೂ ಕಾಲದಲ್ಲಿ. ಕಾಂಗ್ರೆಸ್ ಏನೂ ಮಾಡಿಲ್ಲ ಎನ್ನುವ ನರೇಂದ್ರ ಮೋದಿ ಇವತ್ತಿನವರೆಗೂ ಒಂದೇ ಒಂದು ಅಣೆಕಟ್ಟನ್ನಾಗಲೀ, ಸಾರ್ವಜನಿಕ ಉದ್ದಿಮೆಯನ್ನಾಗಲೀ ಸ್ಥಾಪಿಸಲಿಲ್ಲ. ಇವರಿಗೆ ನೆಹರೂ ಬಗ್ಗೆ ಮಾತನಾಡುವ ಯೋಗ್ಯತೆ ಏನಿದೆ? ಎಂದರು.

ಪ್ರಧಾನಿ ಮೋದಿಯವರಿಗೆ ಬಿಜೆಪಿ, ಎನ್ ಡಿ ಎ ಸೋಲು ಖಚಿತವಾಗಿ ಗೊತ್ತಾಗಿದೆ. ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ. ದೇವರೇ ನನ್ನನ್ನು ಕಳುಹಿಸಿದ್ದು ಎಂದು ಮಾತಾಡುತ್ತಿದ್ದಾರೆ. ಅವರ ಸೋಲು ಮೋದಿಯವರನ್ನು ಈ ಮಟ್ಟಕ್ಕೆ ಮಾಡಿಟ್ಟಿದೆ ಎಂದರು.

ನಮ್ಮ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ದೇಶವನ್ನು ಮಾರ್ಪಡಿಸಲು ಬಿಜೆಪಿ ಮತ್ತು ಮೋದಿ ಯತ್ನಿಸುತ್ತಿದ್ದು ಇದಕ್ಕೆ ಭಾರತೀಯರು ಅವಕಾಶ ಕೊಡುವುದಿಲ್ಲ. ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಭಾರತ ಬಹುತ್ವದ ದೇಶ. ಈ ಬಹುತ್ವದ ದೇಶವನ್ನು ನಾಶ ಮಾಡಿ ಬಿಜೆಪಿ ಮೂಗಿನ ನೇರದ ಹಿಂದೂ ದೇಶ ಮಾಡುವುದು ಅಸಾಧ್ಯ. ಈ ದೇಶ ಪ್ರತಿಯೊಬ್ಬ ಭಾರತೀಯರಿಗೆ ಸೇರಿದ್ದು ಎಂದರು.

Leave a Reply