ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯತ್ತ ರಾಜ್ಯ ನಾಯಕರ ಚಿತ್ತ

1 year ago

ಬೆಂಗಳೂರು: ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮುಗಿಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಹರಿಸಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ನಾಯಕರ ಕೋರಿಕೆ ಮೇರೆಗೆ ಸಿದ್ದರಾಮಯ್ಯ ನವೆಂಬರ್ 15 ರಿಂದ ವಿದರ್ಭ ಭಾಗದಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಲಿದ್ದಾರೆ. ಶಿವಕುಮಾರ್ ರಾಜಕೀಯ ತಂತ್ರಗಾರಿಕೆ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಜಲ ಸಂಪನ್ಮೂಲ ಸಚಿವ ಎಂ ಬಿ ಪಾಟೀಲ್ ಅವರೊಂದಿಗೆ ಸಿದ್ದರಾಮಯ್ಯ ಸೊಲ್ಲಾಪುರ, ಲಾತೂರ್, ಕೊಲ್ಲಾಪುರ ಪುಣೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ. ಈ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಸಮುದಾಯಕ್ಕೆ ಸೇರಿದ ಧನಗರ್ ಸಮುದಾಯದ ಮತದಾರರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಹಾಗೆಯೇ ಕನ್ನಡ ಭಾಷಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದ್ದರಿಂದ ಅವರ ಒಲವು ಗಳಿಸಲು ಆಘಾಡಿ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

ಜಮೀರ್ ಅಹಮದ್ ಖಾನ್ ಅಲ್ಪಸಂಖ್ಯಾತ ಸಮುದಾಯದಲ್ಲಿ ಅತ್ಯಂತ ಪ್ರಭಾವಿಯಾಗಿದ್ದರೆ, ಎಂ ಬಿ ಪಾಟೀಲ್ ಲಿಂಗಾಯಿತ ಸಮುದಾಯದ ಪ್ರಭಾವಿ ನಾಯಕ. ಇವರ ಮೂಲಕ ಮತಗಳನ್ನು ಸೆಳೆಯಲು ಕಾರ್ಯತಂತ್ರ ಹೆಣೆಯಲಾಗಿದೆ.

ಅದೇ ರೀತಿ ಡಿ ಕೆ ಶಿವಕುಮಾರ್ ಮಹಾರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಪರಿಚಿತರಾಗಿದ್ದು, ಮುಂಬೈನಲ್ಲಿಯೇ ಒಂದೆರಡು ದಿನ ವಾಸ್ತವ್ಯ ಹೂಡಲಿದ್ದಾರೆ. ಅವರು ಕಾಂಗ್ರೆಸ್ ಮತ್ತು ಎನ್ ಸಿ ಪಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಮಾಡಿರುವ ಆರೋಪಕ್ಕೆ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭ್ರಷ್ಟಾಚಾರ ಮಾಡಿದ್ದರೆ ನಾನು ರಾಜಕೀಯ ಬಿಡುತ್ತೇನೆ. ನಮ್ಮ ವಿರುದ್ಧ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಬಿಡುತ್ತಾರೆಯೇ? ಎಂದು  ಸವಾಲೆಸೆದಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಿಯೂ ಅದನ್ನೇ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್-19 ವೇಳೆ ನಡೆದ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿಗೆ ಕರ್ನಾಟಕ ಮತ್ತು ಸಿದ್ದರಾಮಯ್ಯ ಟಾರ್ಗೆಟ್. ಕರ್ನಾಟಕ ಅತಿ ದೊಡ್ಡ ರಾಜ್ಯ. ಇಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮಲ್ಲಿ ಯಾವ ಭ್ರಷ್ಟಾಚಾರವೂ ಇಲ್ಲ. ಭ್ರಷ್ಟಾಚಾರ ನಡೆಯುವುದಕ್ಕೂ ಬಿಡುವುದಿಲ್ಲ ಎಂದರು.

Leave a Reply