ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಗೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಕೂಡಾ ಫಲಾನುಭವಿ ಎಂದು ಪರಿಗಣಿಸಲಾಗಿದೆ. ಹೀಗಾಗಿ ಯೋಜನೆಯ ಒಟ್ಟು ಐದು ವರ್ಷಗಳ ಕಂತನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಸಮರ್ಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದಿದ್ದಾರೆ.
ಆಗಸ್ಟ್ 30 ರಂದು ದೇವಿಯ ದರ್ಶನ ಮಾಡಿ, ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು. ಅದೇ ದಿನ ದೇವಿಗೆ ಮೊದಲ ಕಂತಿನ ಹಣವನ್ನು ಸಮರ್ಪಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಅದರಂತೆ ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ಉಳಿದ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದು, ಇದನ್ನು ತಮ್ಮ ಪರವಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ಸಚಿವರ ಪರವಾಗಿ ಹಣದ ಚೆಕ್ ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು ಎಂದು ಹೇಳಿದ್ದಾರೆ.
ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ ಎಂದು ಅವರು ವಿವರಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ ಎಂದು ವಾಗ್ದಾನ ನೀಡಿದ್ದಾರೆ.
ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸ್ಪಷ್ಟನೆ ನೀಡಿದ್ದಾರೆ.




