ನರೇಂದ್ರ ಮೋದಿಯವರೇ 15 ಲಕ್ಷ ರೂಪಾಯಿಗಳನ್ನು ಖಾತೆಗೆ ಹಾಕಿದಿರಾ?: ಡಿ.ಕೆ.ಶಿವಕುಮಾರ್

3 years ago

ಬೆಂಗಳೂರು: ರಾಜ್ಯ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೂತನ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಭರವಸೆಗಳ ಆದೇಶ ಹೊರಬೀಳಲಿದೆ ಎಂದು ಪ್ರಕಟಿಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಹಲವರನ್ನು ಸ್ವಾಗತಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ನಾಲ್ಕು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‍ನ ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿರುವುದಕ್ಕೆ ಧನ್ಯವಾದಗಳು. ನಮ್ಮ ಭರವಸೆಗಳು ಜನ ಸಾಮಾನ್ಯರಿಗಷ್ಟೆ ಅಲ್ಲ ಪ್ರಧಾನಿ ಅವರಿಗೂ ತಟ್ಟಿವೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿಯವರು ನೀಡಿದ್ದ ಗ್ಯಾರಂಟಿಗಳ ಬಗ್ಗೆ ಗೊತ್ತಿಲ್ಲ ಎನಿಸುತ್ತದೆ. ಹಿಂದೆ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಭರವಸೆ ನೀಡಿದ್ದರು. ರಾಜ್ಯ ಬಿಜೆಪಿಯವರು ಹಿಂದಿನ ಚುನಾವಣೆಯಲ್ಲಿ ಒಂದು ಲಕ್ಷ ರೂಪಾಯಿವರೆಗೂ ರೈತರ ಕೃಷಿ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಇತ್ತೀಚೆಗೆ ಬಿಜೆಪಿ ಸರ್ಕಾರ ನೀಡಿದ್ದ ಅಧಿಕೃತ ಜಾಹಿರಾತಿನಲ್ಲಿ ನೋಡಿ, ಹೆಣ್ಣುಮಕ್ಕಳಿಗೆ ತಿಂಗಳಿಗೆ ಎರಡರಿಂದ ಮೂರು ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಪ್ರಧಾನಿಯವರು ಈಗ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ. ಅಲ್ಲಿಗೆ ನಮ್ಮ ಭರವಸೆಗಳು ಅವರ ಮನಸ್ಸಿಗೆ ತಲುಪಿವೆ ಎಂದು ಅರ್ಥ ಎಂದರು.

ಈ ಹಿಂದೆ ಇದೇ ಪ್ರಧಾನಿಯವರು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವುದಾಗಿ ಘೋಷಣೆ ಮಾಡಿ, ಜಾರಿ ಮಾಡುವಲ್ಲಿ ವಿಫಲರಾಗಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಗ್ಯಾಸ್ ಸಿಲಿಂಡರ್‍ಗೆ ಕೈ ಮುಗಿದು ಜನರಲ್ಲಿ ಮತ ಕೇಳಲು ಹೋಗಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರಧಾನಿ ಕರೆ ನೀಡಿದ್ದರು. ಈಗ ಅವರದೇ ಶೈಲಿಯಲ್ಲಿ ನಾವು ಬಾಯಿಯೋ ಬೆಹನೋ ಮತಗಟ್ಟೆಗೆ ಹೋಗುವ ಮುನ್ನಾ ಗ್ಯಾಸ್ ಸಿಲಿಂಡರ್‍ಗೆ ಕೈ ಮುಗಿದು ಹೋಗಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.

ಬಂಡಾಯ ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದ ಡಿ.ಕೆ.ಶಿವಕುಮಾರ್, ಎರಡು ಮೂರು ದಿನದಲ್ಲಿ ಬಂಡಾಯದಿಂದ ನಿವೃತ್ತರಾಗಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡಬೇಕು. ಇಲ್ಲವಾದರೆ ಪಕ್ಷ ತನ್ನ ಚೌಕಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಹೇಳಿದರು.

Leave a Reply